ಬೆಂಗಳೂರು: ನೀಟ್ ಮತ್ತು ಜೆಇಇ ಪರೀಕ್ಷೆ ಮುಂದೂಡಿಕೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಎನ್ಎಸ್ಯುಐ ಕಾರ್ಯಕರ್ತರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು.
ನಗರದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಎನ್ಎಸ್ಯುಐ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರವು ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಇಂದು ದೇಶದೆಲ್ಲೆಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ನಗರದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಎನ್ಎಸ್ಯುಐ ಕಾರ್ಯಕರ್ತರು ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪರೀಕ್ಷೆ ಬೇಡ : ಕೊರೊನಾ ಬಿಕ್ಕಟ್ಟಿನ ನಡುವೆ ಜೆಇಇ ಹಾಗೂ ನೀಟ್ ಪರೀಕ್ಷೆ ಬೇಡ ಎಂದು ಪ್ರತಿಭಟನೆ ನಡೆಸಲಾಯಿತು. ರಾಜ್ಯ ಮತ್ತು ಜಿಲ್ಲಾ ಕೇಂದ್ರ ಮುಖ್ಯ ಕಚೇರಿ ಮುಂದೆ ಪ್ರತಿಭಟನೆಗೆ ಕರೆ ಕೊಡಲಾಗಿದೆ. ಈಗ ಪರೀಕ್ಷೆ ನಡೆಸುವುದರಿಂದ ಬೇರೆ ರಾಜ್ಯದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುಲು ಸಮಸ್ಯೆ ಆಗುತ್ತೆ. ಜೊತೆಗೆ ಬಡ ಮಕ್ಕಳು ಉಳಿದುಕೊಳ್ಳಲು ಕೂಡ ಆಗೋದಿಲ್ಲ. ವಿದ್ಯಾರ್ಥಿ ವಿರೋಧಿ ನರೇಂದ್ರ ಮೋದಿ ಸರ್ಕಾರಕ್ಕೆ ಧಿಕ್ಕಾರ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು.
ವಿದ್ಯಾರ್ಥಿಗಳಿಗೆ ಅನಾನುಕೂಲ: ಎನ್ಎಸ್ಯುಐ ಅಧ್ಯಕ್ಷ ಮಂಜುನಾಥ್ ಮಾತನಾಡಿ, ನೀಟ್ ಮತ್ತು ಜೆಇಇ ಪರೀಕ್ಷೆ ಮಾಡುವುದರಿಂದ ವಿದ್ಯಾರ್ಥಿಗಳನ್ನು ಸಾವಿನ ದವಡೆಗೆ ದೂಡಿದಂತಾಗುತ್ತದೆ. ಈ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಬೇಕು. ಕೋವಿಡ್ ದಿನೇ ದಿನೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕಷ್ಟ ಆಗುತ್ತೆ. ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಬೆಂಗಳೂರಿನಲ್ಲಿ ಕೋವಿಡ್ ಹೆಚ್ಚಾಗುತ್ತಿದೆ, ವಿದ್ಯಾರ್ಥಿಗಳು ಕೊರೊನಾ ಜೊತೆಗೆ ಮನೆಗೆ ಹೋಗಬೇಕಾಗುತ್ತದೆ. ದೇಶದಾದ್ಯಂತ ಎನ್ಎಸ್ಯುಐ ಕೇಂದ್ರ ಸರ್ಕಾರದ ಈ ನಿರ್ಧಾರದ ವಿರುದ್ಧ ಹೋರಾಟ ಮಾಡುತ್ತಿದೆ ಎಂದರು.