ಕರ್ನಾಟಕ

karnataka

ETV Bharat / state

ವೃದ್ಧಾಪ್ಯ ವೇತನ ವಿಳಂಬ : ಕೇಂದ್ರ-ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

2020ರ ಜನವರಿ ತಿಂಗಳಿಂದ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೃದ್ಧಾಪ್ಯ ವೇತನ ಅಥವಾ ಪಿಂಚಣಿಯನ್ನು ನಿಗದಿತ ಅವಧಿಯಲ್ಲಿ ನೀಡುತ್ತಿಲ್ಲ. ಹಿರಿಯ ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಿಂಚಣಿ ಮೊತ್ತವನ್ನು ಹೆಚ್ಚಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

By

Published : Oct 16, 2020, 11:45 PM IST

High Court
ಹೈಕೋರ್ಟ್

ಬೆಂಗಳೂರು: ಸಂಧ್ಯಾ ಸುರಕ್ಷಾ ಯೋಜನೆ ಹಾಗೂ ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ವೇತನ ಯೋಜನೆ ಅಡಿ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ಪಿಂಚಣಿಯನ್ನು ಸರಿಯಾಗಿ ನೀಡುತ್ತಿಲ್ಲ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಮಾಡಿದೆ.

ಈ ಕುರಿತು ಅಖಿಲ ಕರ್ನಾಟಕ ವಯೋವೃದ್ಧರ ಒಕ್ಕೂಟ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲಕಾಲ ಅರ್ಜಿದಾರರ ಪರ ವಕೀಲ ಕ್ಲಿಪ್ಟನ್ ಡಿ ರೊಜಾರಿಯೋ ಅವರ ವಾದ ಆಲಿಸಿದ ಪೀಠ, ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪಿಂಚಣಿ ಮತ್ತು ಸಾಮಾಜಿಕ ಭದ್ರತೆ ನಿರ್ದೇಶನಾಲಯ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಮಾಡಿತು. ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ನವೆಂಬರ್ 17ಕ್ಕೆ ಮುಂದೂಡಿತು.

ಅರ್ಜಿದಾರರ ಕೋರಿಕೆ: 2020ರ ಜನವರಿ ತಿಂಗಳಿಂದ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ವೃದ್ಧಾಪ್ಯ ವೇತನ ಅಥವಾ ಪಿಂಚಣಿಯನ್ನು ನಿಗದಿತ ಅವಧಿಯಲ್ಲಿ ನೀಡುತ್ತಿಲ್ಲ. ಆದ್ದರಿಂದ ಕಳೆದ ಜನವರಿಯಿಂದ ಬಾಕಿ ಉಳಿದಿರುವ ವೃದ್ಧಾಪ್ಯ ವೇತನವನ್ನು ತಕ್ಷಣವೇ ನೀಡುವಂತೆ ಸರ್ಕಾರ ಹಾಗೂ ಪಿಂಚಣಿ ಮತ್ತು ಸಾಮಾಜಿಕ ಭದ್ರತಾ ನಿರ್ದೇಶನಾಲಯಕ್ಕೆ ನಿರ್ದೇಶಿಸಬೇಕು. ಹಿರಿಯ ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪಿಂಚಣಿ ಮೊತ್ತವನ್ನು ಹೆಚ್ಚಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ABOUT THE AUTHOR

...view details