ಬೆಂಗಳೂರು:ನಾರಾಯಣ ನೇತ್ರಾಯಲಯದ ಮುಖ್ಯಸ್ಥ ಖ್ಯಾತ ನೇತ್ರ ತಜ್ಞ ಡಾಕ್ಟರ್ ಭುಜಂಗ ಶೆಟ್ಟಿ (69) ಶುಕ್ರವಾರ ನಿಧನರಾದರು. ಎಂದಿನಂತೆ ರೋಗಿಗಳನ್ನು ನೋಡಿ ಶುಕ್ರವಾರ ಸಂಜೆ ಮನೆಗೆ ತೆರಳಿದ್ದ ಅವರಿಗೆ ತೀವ್ರ ಹೃದಯಾಘಾತ ಉಂಟಾಗಿದೆ. ತಕ್ಷಣ ಅವರನ್ನು ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಓದಿದ್ದ ಅವರು 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮೀಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದ ರೆಸಿಡೆನ್ಸಿ ಮಾಡಿದರು. 80 ರ ದಶಕದಲ್ಲಿ ಸಣ್ಣ ಕ್ಲಿನಿಕ್‌ನಲ್ಲಿ ಪ್ರಾರಂಭಿಸಿ ತದ ನಂತರ ಕರ್ನಾಟಕದ ಅತಿದೊಡ್ಡ ನಾರಾಯಣ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಸ್ಥಾಪಿಸಿದರು. ಅವರು ತಜ್ಞ ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸಕರಾಗಿ ಸೇವೆ ಸಲ್ಲಿಸಿದ್ದರು.
ಸಂತಾಪ ಸೂಚಿಸಿದ ನಿಯೋಜಿತ ಸಿಎಂ ಸಿದ್ದರಾಮಯ್ಯ:ನಾರಾಯಣ ನೇತ್ರಾಲಯದ ಖ್ಯಾತ ನೇತ್ರತಜ್ಞರಾದ ಡಾ. ಭುಜಂಗ ಶೆಟ್ಟಿ ಅವರ ನಿಧನದ ಸುದ್ದಿ ಆಘಾತವುಂಟುಮಾಡಿದೆ. ಭುಜಂಗ ಶೆಟ್ಟಿಯವರು ಲಕ್ಷಾಂತರ ಜನರಿಗೆ ದೃಷ್ಟಿ ಸಾಮರ್ಥ್ಯ ನೀಡುವ ಮೂಲಕ ಅವರ ಕುಟುಂಬಗಳಿಗೆ ಬೆಳಕಾದವರು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದು ಹಾಕಿಕೊಂಡಿದ್ದಾರೆ.
ಭುಜಂಗ ಶೆಟ್ಟಿ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ:ಖ್ಯಾತ ನೇತ್ರತಜ್ಞ ಡಾ. ಕೆ. ಭುಜಂಗ ಶೆಟ್ಟಿ ಅವರ ನಿಧನಕ್ಕೆ ನಿಯೋಜಿತ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಭುಜಂಗ ಶೆಟ್ಟಿ ಅವರು ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅಪಾರ. ರಾಜ್ಯ ಕಂಡ ಶ್ರೇಷ್ಠ ವೈದ್ಯರಲ್ಲಿ ಒಬ್ಬರು. ಜನರಲ್ಲಿ ಆರೋಗ್ಯ ಕುರಿತು ಜಾಗೃತಿ ಮೂಡಿಸುತ್ತ ಬಹಳ ದೂರದೃಷ್ಟಿ ಹೊಂದಿದ್ದ ವೈದ್ಯರಾಗಿದ್ದರು ಎಂದು ಡಿ ಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾರಾಯಣ ನೇತ್ರಾಲಯದ ಮುಖ್ಯಸ್ಥರಾಗಿ ಭುಜಂಗ ಶೆಟ್ಟಿ ಅವರು ಈ ಸಂಸ್ಥೆಯನ್ನು ಅತ್ಯುನ್ನತ ಮಟ್ಟಕ್ಕೆ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಅತ್ಯಾಧುನಿಕ ತಂತ್ರಜ್ಞಾನ ಮೂಲಕ ಸಾರ್ವಜನಿಕರಿಗೆ ಸೇವೆ ಒದಗಿಸಿಕೊಂಡು ಬಂದಿದ್ದವರು. ಆರೋಗ್ಯ ಕ್ಷೇತ್ರದಲ್ಲಿ ಅಪಾರ ಸೇವೆಗೆ 2010 ರಲ್ಲಿ ರಾಜ್ಯೋತ್ಸವ ಪುರಸ್ಕಾರ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಇವರು ಭಾಜನರಾಗಿದ್ದಾರೆ. ಭುಜಂಗ ಶೆಟ್ಟಿ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಬಹಳ ಬೇಸರವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಆತ್ಮೀಯರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್ ಅವರು ತಮ್ಮ ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ.