ಕರ್ನಾಟಕ

karnataka

By

Published : Mar 29, 2021, 7:19 AM IST

ETV Bharat / state

ಕೇಂದ್ರ - ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸರಣಿ ಟ್ವೀಟ್​ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ
Siddaramaiah

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸರಣಿ ಟ್ವೀಟ್​ ಮಾಡುವ ಮೂಲಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಅನುದಾನ ಸಮರ್ಪಕವಾಗಿ ನೀಡದ ಹಿನ್ನೆಲೆಯಲ್ಲಿ ಅಭಿವೃದ್ಧಿಗೆ ಹಿನ್ನಡೆ ಉಂಟಾಗಿದೆ ಎಂದು ಹಿಂದಿನಿಂದಲೂ ಆರೋಪಿಸುತ್ತ ಬಂದಿರುವ ಸಿದ್ದರಾಮಯ್ಯ, ಇದೀಗ ಸಚಿವ ಮಾಧುಸ್ವಾಮಿ ನೀಡಿರುವ ಹೇಳಿಕೆಯನ್ನು ಸಂಬೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನೊಂದೆಡೆ ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾರಿಗೆ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆಯನ್ನು ಖಂಡಿಸಿರುವ ಅವರು, ಇದು ರಾಜ್ಯ ಸರ್ಕಾರದ ಪ್ರಾಯೋಜಿತ ಗೂಂಡಾಗಿರಿ ಇದು ಎಂದು ಆರೋಪಿಸಿದ್ದಾರೆ.

ಸರ್ಕಾರದ ಪ್ರಾಯೋಜಿತ ಗೂಂಡಾಗಿರಿ:

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಅಭಿಮಾನಿಗಳೆಂದು ಹೇಳಿಕೊಂಡವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾರುಗಳ ಮೇಲೆ ಕಲ್ಲೆಸೆದು ಪುಂಡಾಟಿಕೆ ನಡೆಸಿರುವುದು ಖಂಡನೀಯ. ಇದು ರಾಜ್ಯ ಬಿಜೆಪಿ ಸರ್ಕಾರದ ಪ್ರಾಯೋಜಿತ ಗೂಂಡಾಗಿರಿ. ರಾಜ್ಯದ ಜನರು ಗಮನಿಸುತ್ತಿದ್ದಾರೆ. ಎಚ್ಚರ ಇರಲಿ, ಬಿಜೆಪಿ ಸರ್ಕಾರದ ಆಳ್ವಿಕೆಯಲ್ಲಿ ವಿರೋಧಪಕ್ಷದ ರಾಜ್ಯಾಧ್ಯಕ್ಷರಿಗೆ ರಕ್ಷಣೆ ಇಲ್ಲ ಎಂದಾದರೆ ಸಾಮಾನ್ಯ ಜನರ ಪಾಡೇನು, ರಾಜ್ಯದ ಪೊಲೀಸರ ಮೇಲೆ ನನಗೆ ನಂಬಿಕೆ ಇಲ್ಲ ಎಂಬ ಸಿಡಿ ಹಗರಣದ ಯುವತಿಯ ಹೇಳಿಕೆಯನ್ನು ಸಮರ್ಥಿಸುವಂತಿದೆ ಎಂದು ಹೇಳಿದ್ದಾರೆ.

ಸರ್ವಾಧಿಕಾರಿ ಮೋದಿ :

ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದ ರಾಜ್ಯದ ಅಭಿವೃದ್ಧಿಗೆ ಧಕ್ಕೆಯಾಗುತ್ತಿರುವುದು ಮತ್ತು ರಾಜ್ಯದ ಯುವಜನ ಉದ್ಯೋಗ ಕಳೆದುಕೊಳ್ಳುತ್ತಿರುವ ಬಗ್ಗೆ ಸಚಿವ ಜೆ.ಸಿ.ಮಾಧುಸ್ವಾಮಿ ವ್ಯಕ್ತಪಡಿಸಿರುವ ಕಳವಳ ರಾಜ್ಯದ 6.5 ಕೋಟಿ ಜನತೆಯ ಕೊರಳ ದನಿಯಾಗಿದೆ. ಕಳೆದ 7 ವರ್ಷಗಳಿಂದ ನಾನು ಇದನ್ನು ಹೇಳುತ್ತಲೇ ಬಂದಿದ್ದೇನೆ. ಸಂವಿಧಾನದತ್ತ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಹೊಂದಿರುವ ಸ್ವಾಯತ್ತತೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಕಿತ್ತುಕೊಳ್ಳುತ್ತಿರುವುದಕ್ಕೆ ಇತ್ತೀಚೆಗೆ ಜಾರಿಗೊಳಿಸಿರುವ ರೈತರ ಪಾಲಿನ ಮರಣಶಾಸನಗಳಾಗಿರುವ ಕೃಷಿ ಕಾಯ್ದೆ ತಿದ್ದುಪಡಿಗಳೇ ಸಾಕ್ಷಿಯಾಗಿವೆ ಎಂದಿದ್ದಾರೆ.

ಆರ್ಥಿಕ ದಿವಾಳಿ :

2020-21ರ ಹಣಕಾಸು ವರ್ಷದಲ್ಲಿ ರಾಜ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರದಿಂದ 8,538 ಕೋಟಿ ರೂ.ತೆರಿಗೆ ಪಾಲು ಮತ್ತು 1,310 ಕೋಟಿ ರೂ. ಕೇಂದ್ರ ಅನುದಾನ ಬಂದಿಲ್ಲ. ಇದರ ಜೊತೆ 5,495 ಕೋಟಿ ರೂ. ವಿಶೇಷ ಅನುದಾನಕ್ಕೂ ಕೊಕ್ಕೆ ಹಾಕಲಾಗಿದೆ. ನಮ್ಮ 25 ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ. ಸಂವಿಧಾನದ ಪ್ರಕಾರ ರಾಜ್ಯಗಳಿಗೆ ಸಂಬಂಧಿಸಿದ ವಿಷಯಗಳ ಕಾನೂನುಗಳಿಗೆ ಏಕಪಕ್ಷೀಯವಾಗಿ ತಿದ್ದುಪಡಿ ಮಾಡಿ ಅದನ್ನು ಅಂಗೀಕರಿಸುವಂತೆ ರಾಜ್ಯಗಳ ಮೇಲೆ ಒತ್ತಡ ಹೇರುತ್ತಿರುವ ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿದೆ. ರಾಜ್ಯಗಳು ಆರ್ಥಿಕವಾಗಿ ದಿವಾಳಿಯಾಗಲು ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯೇ ಕಾರಣ ಎಂದು ಕಿಡಿಕಾರಿದ್ದಾರೆ.

ABOUT THE AUTHOR

...view details