ಕರ್ನಾಟಕ

karnataka

ETV Bharat / state

ಗಲಭೆ ಪ್ರಕರಣದ ದಿಕ್ಕು ತಪ್ಪಿಸಲು ಬಿಜೆಪಿ ಯತ್ನ: ಸಿದ್ದರಾಮಯ್ಯ - ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ

ಗಲಭೆಯ ಹಿಂದಿನ ಅಪರಾಧಿಗಳನ್ನು ಪತ್ತೆ ಹಚ್ಚುವುದಕ್ಕಿಂತ ಹೆಚ್ಚು ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವುದು ಹೇಗೆ?, ಇದನ್ನು ಕೋಮುಗಲಭೆ ಎಂದು ಬಣ್ಣಿಸಿ ರಾಜಕೀಯ ಲಾಭ ಗಳಿಸುವುದು ಹೇಗೆ? ಎನ್ನುವ ಬಗ್ಗೆ ರಾಜ್ಯ ಬಿಜೆಪಿ ನಾಯಕರು ತಲೆಕೆಡಿಸಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

Opposition Party Leader Siddaramaiah
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ

By

Published : Aug 18, 2020, 7:30 PM IST

ಬೆಂಗಳೂರು:ಮಹಾನಗರದಲ್ಲಿ ಕಳೆದ ವಾರ ನಡೆದ ಗಲಭೆ ಪ್ರಕರಣದ ದಿಕ್ಕು ತಪ್ಪಿಸಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾವಲ್ ಭೈರಸಂದ್ರ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ. ದಿನಕ್ಕೊಬ್ಬ ಸಚಿವರು, ಶಾಸಕರು ಭೇಟಿ ನೀಡಿ, ಗಲಭೆಗೆ ಎಸ್​ಡಿಪಿಐ, ಕಾಂಗ್ರೆಸ್, ಭಯೋತ್ಪಾದಕರು ಕಾರಣ ಎಂದು ನೀಡುತ್ತಿರುವ ಹೇಳಿಕೆಗಳೇ ಇದಕ್ಕೆ ಸಾಕ್ಷಿ ಎಂದಿದ್ದಾರೆ.

ಗಲಭೆಯ ಹಿಂದಿನ ಅಪರಾಧಿಗಳನ್ನು ಪತ್ತೆ ಹಚ್ಚುವುದಕ್ಕಿಂತ ಹೆಚ್ಚು ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವುದು ಹೇಗೆ?, ಇದನ್ನು ಕೋಮುಗಲಭೆ ಎಂದು ಬಣ್ಣಿಸಿ ರಾಜಕೀಯ ಲಾಭ ಗಳಿಸುವುದು ಹೇಗೆ? ಎನ್ನುವ ಬಗ್ಗೆ ರಾಜ್ಯ ಬಿಜೆಪಿ ನಾಯಕರು ತಲೆಕೆಡಿಸಿಕೊಂಡಿದ್ದಾರೆ.

ಬಿಜೆಪಿ ರಾಜ್ಯದಲ್ಲಿ ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪದಚ್ಯುತಿಗೆ ಕೆಲವು ಆರ್​ಎಸ್​ಎಸ್ ಸಮೀಪವರ್ತಿ ನಾಯಕರು ನಡೆಸುತ್ತಿರುವ ಪ್ರಯತ್ನಕ್ಕೆ ಕೆ.ಜೆ.ಹಳ್ಳಿ-ಡಿ.ಜೆ.ಹಳ್ಳಿ ಪ್ರಕರಣವನ್ನು ಯಥೇಚ್ಚವಾಗಿ ಬಳಸಲಾಗುತ್ತಿದೆ ಎಂದಿದ್ದಾರೆ.

ರಾಜ್ಯದಲ್ಲಿ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿರುವ ನಮ್ಮದೇ ಪಕ್ಷದ ಶಾಸಕರು ಮತ್ತು ನಮ್ಮ ಪಕ್ಷದ ಕಾರ್ಪೋರೇಟರ್​ಗಳು ಇರುವಾಗ ಕಾವಲ್ ಭೈರಸಂದ್ರ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರೂ ಏನು?, ಅಲ್ಲಿ ಚುನಾವಣೆಯಲ್ಲಿ ಎದುರಿಸಲಾಗದ ರಾಜಕೀಯ ಪಕ್ಷಗಳೇ ಪ್ರಕರಣದ ರಾಜಕೀಯ ಲಾಭ ಪಡೆಯಲು ಹೊರಟಿರುವುದು ಸ್ಪಷ್ಟ. ಗಲಭೆಯ ನಿಜವಾದ ತನಿಖೆ ಬಿಜೆಪಿ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯದಿಂದ ಶುರುವಾಗಬೇಕು. ಸರ್ಕಾರದ ಪ್ರಕಾರ ಇದು ಪೂರ್ವಯೋಜಿತ ಕೃತ್ಯವಾಗಿದ್ದರೆ ಅದು ಯಾಕೆ ಪೊಲೀಸರ ಗಮನಕ್ಕೆ ಬಂದಿಲ್ಲ?, ಪ್ರಚೋದನಕಾರಿ ಪೋಸ್ಟ್ ಹಾಕಿರುವ ನವೀನ್ ವಿರುದ್ಧ ಪ್ರಕರಣ ದಾಖಲಿಸಲು ವಿಳಂಬಕ್ಕೆ ಯಾರು ಕಾರಣ? ಎಂದು ಕೇಳಿದ್ದಾರೆ.

ಎಸ್​ಡಿಪಿಐ ನಾಯಕರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಿ, ಆ ಸಂಘಟನೆ ತಪ್ಪು ಮಾಡಿದ್ದರೆ ಅದರ ವಿರುದ್ಧ ಕ್ರಮ ಕೈಗೊಳ್ಳಿ. ಮುಸ್ಲಿಂ ಮತಗಳನ್ನು ಒಡೆಯಲು ಎಸ್​ಡಿಪಿಐ ಅನ್ನು ಯೋಜಿತ ರೀತಿಯಲ್ಲಿ ಬಳಸಿಕೊಳ್ಳುತ್ತಾ ಬಂದಿರುವ ಬಿಜೆಪಿಗೆ ಅದನ್ನು ನಿಷೇಧಿಸುವ ಧೈರ್ಯ ಇದೆಯೇ? ಎಂದು ಸವಾಲು ಹಾಕಿದ್ದಾರೆ.

For All Latest Updates

ABOUT THE AUTHOR

...view details