ಬೆಂಗಳೂರು:ಜಿಲ್ಲಾ, ತಾಲೂಕು ಆಸ್ಪತ್ರೆಗಳು ಸೇರಿದಂತೆ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಮ್ಲಜನಕ ಉತ್ಪಾದಕ ಘಟಕಗಳನ್ನು ಸ್ಥಾಪಿಸಲಾಗುತ್ತಿದ್ದು, ಅವುಗಳ ನಿರ್ವಹಣೆ ಮತ್ತು ಕಾರ್ಯಾಚರಣೆಗೆ ಐಟಿಐ ವಿದ್ಯಾರ್ಥಿಗಳನ್ನೇ ನೇಮಕ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ, ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.
ವಿಕಾಸಸೌಧದಲ್ಲಿ ಇಂದು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐಟಿಐನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆಕ್ಸಿಜನ್ ಘಟಕಗಳ ನಿರ್ವಹಣೆ-ಕಾರ್ಯಾಚರಣೆ ಕುರಿತ ಆನ್‌ಲೈನ್ ತರಬೇತಿಗೆ ವರ್ಚುಯಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ ರಾಜ್ಯದ ಪ್ರತಿಯೊಂದು ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕಗಳನ್ನು ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ. ಇದುವರೆಗೆ 350 ಘಟಕಗಳನ್ನು ಅಳವಡಿಸಲಾಗಿದೆ. ಇವುಗಳ ನಿರ್ವಹಣೆಯ ಹೊಣೆಯನ್ನು ಐಟಿಐ ವಿದ್ಯಾರ್ಥಿಗಳಿಗೆ ವಹಿಸುವುದು ಉತ್ತಮ ಎಂದರು.