ಬೆಂಗಳೂರು: ನಾಡೋಜ, ಲೇಖಕ, ಪತ್ರಕರ್ತ ಪಾಟೀಲ ಪುಟ್ಟಪ್ಪ ಅವರ ನಿಧನಕ್ಕೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಕನ್ನಡ ಹೋರಾಟಗಾರ, ಖ್ಯಾತ ಬರಹಗಾರ, ಮಾಜಿ ಸಂಸದ, ನಾಡೋಜ ಶ್ರೀ ಪಾಟೀಲ ಪುಟ್ಟಪ್ಪ ಅವರ ನಿಧನದಿಂದ ನಾವು ಒಬ್ಬ ಮುತ್ಸದ್ದಿಯನ್ನು ಕಳೆದುಕೊಂಡಿದ್ದೇವೆ. ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ್ದ ಅವರು ಕನ್ನಡ ಕಾವಲು ಸಮಿತಿಯ ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದರು. ಎಲ್ಲಕ್ಕಿಂತ ಹೆಚ್ಚಾಗಿ ಅವರು ನಾಡಿನ ಸಾಕ್ಷಿ ಪ್ರಜ್ಞೆಯಾಗಿದ್ದರು. ಭಗವಂತನು ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಸಂತಾಪವನ್ನು ಸಂದೇಶದ ಮೂಲಕ ತಿಳಿಸಿದ್ದಾರೆ.
ಇನ್ನು ಡಿಸಿಎಂ ಕಾರಜೋಳ ಕೂಡ ಸಂತಾಪ ಸೂಚಿಸಿದ್ದು, ಪಾಪು ಎಂದೇ ಖ್ಯಾತರಾಗಿದ್ದ ಪಾಟೀಲ ಪುಟ್ಟಪ್ಪನವರು ಸ್ವಾತಂತ್ರ್ಯ ಹೋರಾಟಗಾರರಾಗಿ ಪತ್ರಿಕೋದ್ಯಮ, ಸಾಹಿತ್ಯ ರಚನೆ ಮತ್ತು ಕನ್ನಡಪರ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿದ್ದವರು. ನವಯುಗ ಮಾಸ ಪತ್ರಿಕೆಯ ಸಂಪಾದಕರಾಗಿ ಹಾಗೂ ಪ್ರಪಂಚ ಪತ್ರಿಕೆಯನ್ನು ಸ್ಥಾಪಿಸಿದ್ದಲ್ಲದೆ, ಅಂಕಣಕಾರರಾಗಿದ್ದರು. ಪಾಟೀಲ ಪುಟ್ಟಪ್ಪನವರು ಸಾರ್ವಜನಿಕ ರಂಗಗಳಲ್ಲಿಯೂ ಸಾಕಷ್ಟು ದುಡಿದವರು. ರಾಜ್ಯಸಭಾ ಸದಸ್ಯರಾಗಿ, ಕನ್ನಡ ಕಾವಲು ಮತ್ತು ಗಡಿ ಸಲಹಾ ಸಮಿತಿ ಸಂಸ್ಥಾಪನಾ ಅಧ್ಯಕ್ಷ, ಅಖಿಲ ಕರ್ನಾಟಕ ಹೋರಾಟ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಅನನ್ಯ ಸೇವೆ ಸಲ್ಲಿಸಿದ್ದಾರೆ.
ಪಾಟೀಲ ಪುಟ್ಟಪ್ಪನವರ ನಿಧನದಿಂದ ಕನ್ನಡ ನಾಡು ಧೀಮಂತ ವ್ಯಕ್ತಿಯೊಬ್ಬರನ್ನು ಕಳೆದುಕೊಂಡಂತಾಗಿದ್ದು, ಭರಿಸಲಾರದ ನಷ್ಟ ಉಂಟಾಗಿದೆ ಎಂದು ವಿಷಾದಿಸಿರುವ ಉಪ ಮುಖ್ಯಮಂತ್ರಿಗಳು, ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಿ ಅವರ ಕುಟುಂಬಕ್ಕೆ ದು:ಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.