ಬೆಂಗಳೂರು: ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುವ ವೇಳೆ ನಿಯಮ ಉಲ್ಲಂಘಿಸಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಶಶಿಕಲಾ ಜೊಲ್ಲೆ ಅವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನದವರೆಗೆ ‘ಝೀರೋ ಟ್ರಾಫಿಕ್’ ನೀಡುವ ಮೂಲಕ ನಿಯಮ ಉಲ್ಲಂಘಿಸಲಾಗಿದೆ ಎಂದು ಆಕ್ಷೇಪಿಸಿ ವಕೀಲ ಜಿ. ಬಾಲಾಜಿ ನಾಯ್ಡು ಎಂಬುವರು ಸಲ್ಲಿಸಿದ್ದರು. ಈ ಪಿಐಎಲ್ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರು ಹೈಕೋರ್ಟ್ ನಿರ್ದೇಶನದಂತೆ ದೂರುದಾರರು ಸಕ್ಷಮ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದರು. ಆದರೆ, ಸಕ್ಷಮ ಪ್ರಾಧಿಕಾರ ಮನವಿಯನ್ನು ಪರಿಗಣಿಸಲು ನಿರಾಕರಿಸಿದೆ. ಇನ್ನು ಆಡಳಿತಾತ್ಮಕ ಅಧಿಕಾರ ದುರ್ಬಳಕೆಯ ಬಗ್ಗೆಯಾಗಲಿ, ಯಾವುದೇ ನಿಯಮ ಉಲ್ಲಂಘನೆಯಾಗಿರುವ ಬಗ್ಗೆಯಾಗಲಿ ಅರ್ಜಿದಾರರು ಸಾಕ್ಷ್ಯಾಧಾರಗಳನ್ನು ಒದಗಿಸಲು ವಿಫಲವಾಗಿದ್ದಾರೆ. ಹೀಗಾಗಿ ಪ್ರಾಧಿಕಾರ ಮನವಿಯನ್ನು ತಿರಸ್ಕರಿಸಿದೆ ಎಂದು ತಿಳಿಸಿದರು.
ಸರ್ಕಾರದ ಪರ ವಕೀಲರ ಹೇಳಿಕೆ ದಾಖಿಸಿಕೊಂಡ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿತು. ಹಿಂದಿನ ವಿಚಾರಣೆ ವೇಳೆ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುವುದಕ್ಕೂ ಮುನ್ನ ಅರ್ಜಿದಾರರು ಕ್ರಮ ಕೋರಿ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಬೇಕೆಂದು ಸೂಚಿಸಿತ್ತು. ಅಲ್ಲದೇ, ಮನವಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಿ, ಕೈಗೊಂಡ ಕ್ರಮದ ಬಗ್ಗೆ ಮುಂದಿನ ವಿಚಾರಣೆ ಸಂದರ್ಭದಲ್ಲಿ ಮಾಹಿತಿ ನೀಡಲು ಸೂಚಿಸಿತ್ತು.