ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ನಗರದಲ್ಲಿ ಶನಿವಾರ ಮತ್ತು ಭಾನುವಾರ ನಡೆಸಲು ಉದ್ದೇಶಿಸಿರುವ 37 ಕಿ.ಮೀ ರೋಡ್ ಶೋಗೆ ತಡೆ ನೀಡಲು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ವಕೀಲ ಎನ್ ಪಿ ಅಮೃತೇಶ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ವಿಜಯ್‌ಕುಮಾರ್ ಎಸ್.ಪಾಟೀಲ್ ಅವರಿದ್ದ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಲಿದೆ.
ಅರ್ಜಿಯಲ್ಲೇನಿದೆ?: ರಾಜ್ಯ ಬಿಜೆಪಿ ವತಿಯಿಂದ ರೋಡ್ ಶೋ ನಡೆಸುವುದಕ್ಕೆ ನೀಡಿರುವ ಅನುಮತಿ, ಸಂಚಾರ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಲು ರಾಜ್ಯ ಸರ್ಕಾರ, ಪೊಲೀಸ್ ಮಹಾನಿರ್ದೇಶಕರು ಮತ್ತು ಬೆಂಗಳೂರು ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲು ಯಾವುದೇ ರಾಜಕೀಯ ಪಕ್ಷ ಅಥವಾ ಸಂಘಟನೆಗೆ ಅನುಮತಿ ನೀಡದಂತೆ ಪೊಲೀಸ್ ಮಹಾನಿರ್ದೇಶಕರಿಗೆ ಮತ್ತು ಬೆಂಗಳೂರು ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಬೇಕು.
ರೋಡ್ ಶೋ ನಿರ್ಬಂಧ ಮತ್ತು ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ನಡೆಸದಂತೆ ಸರ್ಕಾರ, ಪೊಲೀಸರು ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು. ಇದರಿಂದ ರಾಜಕೀಯ ಪಕ್ಷಗಳ ನಡುವಿನ ಕಿತ್ತಾಟಕ್ಕೆ ಅವಕಾಶವಿರುವುದಿಲ್ಲ. ಅಲ್ಲದೇ, ಸಮಾಜಘಾತುಕ ಶಕ್ತಿಗಳಿಂದ ಅಹಿತಕರ ಘಟನೆಗೆ ಅವಕಾಶ ಇರುವುದಿಲ್ಲ ಎಂದು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.
ಬೆಂಗಳೂರಿನಲ್ಲಿ 37ಕಿ.ಮೀ ವ್ಯಾಪ್ತಿಯಲ್ಲಿ ಮೋದಿ ರೋಡ್ ಶೋ ನಡೆಸಲು ಉದ್ದೇಶಿಸಲಾಗಿದ್ದು, ಇದು ಮೂರು ಲೋಕಸಭಾ ಕ್ಷೇತ್ರಗಳನ್ನು ಒಳಗೊಳ್ಳಲಿದೆ. ಬೆಳಗ್ಗೆ 10 ಗಂಟೆಗೆ ರೋಡ್ ಶೋ ಆರಂಭವಾಗಲಿದ್ದು, 45 ವಿಧಾನಸಭಾ ಕ್ಷೇತ್ರಗಳನ್ನು ಇದು ಒಳಗೊಂಡಿದೆ. ಸಂಜೆ 4ಕ್ಕೆ ಮತ್ತೆ ರೋಡ್ ಶೋ ಆರಂಭವಾಗಲಿದ್ದು, 13 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ.