ಬೆಂಗಳೂರು : ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಜಾಪ್ರತಿನಿಧಿ ಕಾಯಿದೆ ಅನ್ವಯ ಅನರ್ಹಗೊಳಿಸಬೇಕು ಎಂದು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ವರುಣಾ ವಿಧಾನಸಭಾ ಕ್ಷೇತ್ರದ ಕೂಡನಹಳ್ಳಿಯ ಕೆ ಶಂಕರ ಅವರು ಸಲ್ಲಿಸಿರುವ ಚುನಾವಣಾ ಅರ್ಜಿ ಇಂದು ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರ ನೇತೃತ್ವದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿತ್ತು. ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮುಂದಿನ ಶುಕ್ರವಾರಕ್ಕೆ ಮುಂದೂಡಿತು.
ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್ 123 (1) ಪ್ರಕಾರ ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡುವುದು ಲಂಚಕ್ಕೆ ಸಮ. ಸೆಕ್ಷನ್ 123 (2) ಪ್ರಕಾರ ಇದು ಮತದಾರರ ಮೇಲೆ ಪ್ರಭಾವ ಬೀರುವ ಯತ್ನವಾಗಿದೆ. ಸೆಕ್ಷನ್ 123 (4)ರ ಪ್ರಕಾರ ಅದನ್ನು ಪ್ರಚಾರ ಮಾಡುವುದೂ ಅಪರಾಧ. ಅಲ್ಲದೇ, ಇದನ್ನು ಅಭ್ಯರ್ಥಿಯ ಚುನಾವಣಾ ಲೆಕ್ಕಕ್ಕೆ ಸೇರ್ಪಡೆ ಮಾಡದಿರುವುದು ಸೆಕ್ಷನ್ 123 (6)ರ ಅಪರಾಧವಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಪ್ರಣಾಳಿಕೆ ಸಿದ್ಧಪಡಿಸಿದವರು, ಅದನ್ನು ಬಳಸಿ ಮತ ಕೇಳಿದ ಎಲ್ಲರ ಆಯ್ಕೆಯೂ ಅಸಿಂಧು ಆಗಬೇಕಾಗುತ್ತದೆ. ಆದರೆ, ಕಾನೂನಿನಲ್ಲಿ ಎಲ್ಲರನ್ನೂ ಪ್ರತಿವಾದಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸಿದ್ದರಾಮಯ್ಯ ಅವರನ್ನು ಮಾತ್ರ ಪ್ರತಿವಾದಿಯನ್ನಾಗಿ ಮಾಡಲಾಗಿದೆ ಎಂದು ವಿವರಿಸಲಾಗಿದೆ.