ಬೆಂಗಳೂರು: ಶ್ರೀರಂಗಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಾಲಯವನ್ನು ಧ್ವಂಸಗೊಳಿಸಿ ಟಿಪ್ಪು ಸುಲ್ತಾನ್ ವಿವಾದಿತ ಜಾಮಿಯಾ ಮಸೀದಿ ನಿರ್ಮಿಸಿದ್ದು, ಈ ಕುರಿತು ಮಸೀದಿ ಜಾಗದ ಬಗ್ಗೆ ಪುರಾತತ್ವ ಇಲಾಖೆಯಿಂದ ಅಧ್ಯಯನ, ಸರ್ವೇ ಹಾಗೂ ಉತ್ಖನನ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.
ಮಂಡ್ಯ ಜಿಲ್ಲೆಯ ಹಾಲಹಳ್ಳಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಭಜರಂಗ ಸೇನೆ ಸಂಘಟನೆಯ ರಾಜ್ಯಾಧ್ಯಕ್ಷ ಬಿ.ಮಂಜುನಾಥ್ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಮುಜರಾಯಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಮಂಡ್ಯ ಜಿಲ್ಲಾಧಿಕಾರಿ, ರಾಜ್ಯ ಧಾರ್ಮಿಕ ಪರಿಷತ್, ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.
ಪುರಾತನ ಕಾಲದಿಂದಲೂ ಈ ಪವಿತ್ರ ದೇವಸ್ಥಾನ ಹಾಗೂ ತೀರ್ಥಯಾತ್ರಾ ಸ್ಥಳವಾಗಿದ್ದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಾಲಯವನ್ನು ವಿಜಯನಗರ ಸಾಮ್ರಾಜ್ಯ, ಮೈಸೂರು ಸಾಮ್ರಾಜ್ಯ ಹಾಗೂ ದಳವಾಯಿ ದೊಡ್ಡಯ್ಯ ಸೇರಿ ಅನೇಕ ಆಡಳಿತಗಾರರು, ಪೋಷಕರು ಆರಾಧನೆ, ಸಂರಕ್ಷಣೆ, ನಿರ್ವಹಣೆ ಹಾಗೂ ಜೀರ್ಣೋದ್ಧಾರ ಮಾಡುತ್ತ ಬಂದಿದ್ದಾರೆ.
ಆದರೆ, ಇದನ್ನು ಧ್ವಂಸಗೊಳಿಸಿದ ಟಿಪ್ಪು ಸುಲ್ತಾನ್ 1786ರಿಂದ 1789ರ ತನ್ನ ಆಡಳಿತಾವಧಿಯಲ್ಲಿ ಜಾಮಿಯಾ ಮಸೀದಿ ನಿರ್ಮಾಣ ಮಾಡಲಾಗಿದೆ. ಟಿಪ್ಪು ಸುಲ್ತಾನ್ ಮಾಡಿದ ಈ ಐತಿಹಾಸಿಕ ಪ್ರಮಾದವನ್ನು ಸರಿಪಡಿಸುವ ಜವಾಬ್ದಾರಿ ಸರ್ಕಾರ ಹಾಗೂ ಸಂಬಂಧಪಟ್ಟ ಪ್ರಾಧಿಕಾರಗಳದ್ದಾಗಿದೆ. ಈ ನಿಟ್ಟಿನಲ್ಲಿ 2022ರ ಮೇ 24ರಂದು ಅರ್ಜಿದಾರ ಸಂಘಟನೆಯಿಂದ ಪ್ರತಿವಾದಿಗಳಿಗೆ ಲೀಗಲ್ ನೋಟಿಸ್ ನೀಡಲಾಗಿದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.
ಅಲ್ಲದೆ, ಶ್ರೀರಂಗಪಟ್ಟಣದಲ್ಲಿರುವ ವಿವಾದಿತ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನ-ಜಾಮಿಯಾ ಮಸೀದಿ ಜಾಗದ ಬಗ್ಗೆ ಪುರಾತತ್ವಶಾಸ್ತ್ರ ಅಧ್ಯಯನ, ಸರ್ವೇ ಹಾಗೂ ಉತ್ಖನನ ನಡೆಸಿ 30 ದಿನಗಳಲ್ಲಿ ಹೈಕೋರ್ಟ್‌ಗೆ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯಕ್ಕೆ ನಿರ್ದೇಶನ ನೀಡಬೇಕು.
ದೇವಾಲಯದ ಆವರಣದಲ್ಲಿರುವ ಹಿಂದೂ ಸಂಸ್ಕೃತಿ ಹಾಗೂ ಪರಂಪರೆಯ ಕುರುಹುಗಳಾಗಿರುವ ಗರುಡ ಕಂಬ, ಕಲ್ಯಾಣಿ, ಸ್ಥೂಪ, ಸ್ತಂಭ, ಹಿಂದೂ ದೇವ-ದೇವತೆಗಳ ಕಲ್ಲಿನ ಕೆತ್ತನೆಗಳು ಹಾಗೂ ಭೂಗತ ದೇವಸ್ಥಾನದ ಭಾಗ, ದೇವಸ್ಥಾನದ ವಾಸ್ತು ಶಿಲ್ಪ, ದೇವಸ್ಥಾನದ ವಿನ್ಯಾಸ, ಹೂತಿಟ್ಟ ವಿಗ್ರಹಗಳನ್ನು ಸಂರಕ್ಷಿಸಿಡಲು ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ, ರಾಜ್ಯ ಸರ್ಕಾರ, ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ನದ್ದು ಆಧಾರ ರಹಿತ ಆರೋಪ, ಅವರೆಲ್ಲ ವಿಚಾರಗಳಲ್ಲಿ ದಿವಾಳಿ: ಸಿಎಂ ಬೊಮ್ಮಾಯಿ