ಬೆಂಗಳೂರು:ವಾಹನಗಳಿಗೆ ‘ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್’ (ಎಚ್‌ಎಸ್‌ಆರ್‌ಪಿ) ಅಳವಡಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ. ಈ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಸೆಪ್ಟೆೆಂಬರ್ 19ಕ್ಕೆ ಮುಂದೂಡಿದೆ.
ರಾಜ್ಯ ಸರ್ಕಾರದ ಅಧಿಸೂಚನೆಗೆ ತಡೆ ನೀಡುವಂತೆ ಕೋರಿ ‘ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ ಮ್ಯಾನುಫ್ಯಾಕ್ಚರರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ’ ಸೇರಿ ಅವಕಾಶವಂಚಿತ ಕೆಲವು ಸಂಸ್ಥೆಗಳು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿದಾರರ ಮಧ್ಯಂತರ ಮನವಿಯ ಬಗ್ಗೆ ಸೆ.19ರಂದು ಪರಿಗಣಿಸುವುದಾಗಿ ತಿಳಿಸಿ ವಿಚಾರಣೆ ಮುಂದೂಡಿತು.
ಅಲ್ಲದೆ, ರಾಜ್ಯ ಸರ್ಕಾರದ ಅಧಿಸೂಚನೆಗೆ ತಡೆ ನೀಡುವಂತೆ ಅರ್ಜಿದಾರರು ಮಧ್ಯಂತರ ಮನವಿ ಮಾಡಿದ್ದಾರೆ. ಅದರ ಬಗ್ಗೆ ಸೆ.19ರಂದು ಪರಿಗಣಿಸಲಾಗುವುದು. ಅಷ್ಟರಲ್ಲಿ ಅರ್ಜಿದಾರರ ಮಧ್ಯಂತರ ಮನವಿ ಬಗ್ಗೆ ರಾಜ್ಯ ಸರ್ಕಾರ ತನ್ನ ಆಕ್ಷೇಪಣೆ ಸಲ್ಲಿಸಬಹುದು ಎಂದು ಸೂಚನೆ ನೀಡಿತು.
ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮುಂಚೆ ನೋಂದಣಿಯಾದ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಲು ‘ಮೂಲ ಉಪಕರಣ ತಯಾರಕ’ (ಒಇಎಂ) ಅಧಿಕೃತ ಡೀಲರ್‌ಗಳ ಮೂಲಕ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರ ಆಗಸ್ಟ್ 17ರಂದು ಅಧಿಸೂಚನೆ ಹೊರಡಿಸಿದೆ. ಕೇಂದ್ರ ಮೋಟಾರು ವಾಹನಗಳ ನಿಯಮಗಳನ್ನು ಮೀರಿ ಅರ್ಜಿದಾರ ಸಂಸ್ಥೆಯಯನ್ನು ಅಧಿಸೂಚನೆಯಿಂದ ಹೊರಗಿಡಲಾಗಿದೆ. ಕೆಲವು ಪ್ರಭಾವಿ ಸಂಸ್ಥೆಗಳಿಗಷ್ಟೇ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂಬುದು ಅರ್ಜಿದಾರರ ವಾದ. ಅರ್ಜಿದಾರರ ಪರ ಹಿರಿಯ ವಕೀಲ ಆದಿತ್ಯ ಸೋಂಧಿ, ಹಿರಿಯ ವಕೀಲ ಸಜನ್ ಪೂವಯ್ಯ, ಹಿರಿಯ ವಕೀಲ ದೇವದತ್ತ ಕಾಮತ್ ವಾದಿಸಿದರು. ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಂ ಹುಯಿಲಗೋಳ ಹಾಜರಿದ್ದರು.
ಇದನ್ನೂ ಓದಿ:ಬಾಕಿ ಇರುವ 80 ಕೋಟಿ ಭಿಕ್ಷುಕರ ಸೆಸ್ ಕುರಿತು ಒಂದು ವಾರದಲ್ಲಿ ಪ್ರಮಾಣ ಪತ್ರ ಸಲ್ಲಿಸಿ : ಹೈಕೋರ್ಟ್