ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್, ಕೆ.ಗೋವಿಂದರಾಜ್, ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಸುನೀಲ್ ಕನಗೋಲು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಿ ಸಂಪುಟ ದರ್ಜೆಯ ಸ್ಥಾನಮಾನ ನೀಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.
ವಕೀಲ ಎಸ್.ಉಮಾಪತಿ ಸಲ್ಲಿಸಿರುವ ಅರ್ಜಿಯಲ್ಲಿ ನಜೀರ್ ಅಹ್ಮದ್, ಕೆ.ಗೋವಿಂದರಾಜ್, ಸುನೀಲ್ ಕನಗೋಲು ಹಾಗೂ ಕೆ.ವಿ.ಪ್ರಭಾಕರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಅರ್ಜಿಯಲ್ಲಿರುವ ಅಂಶಗಳು:ನಜೀರ್ ಅಹ್ಮದ್, ಕೆ.ಗೋವಿಂದರಾಜ್, ಸುನೀಲ್ ಕನಗೋಲು ಹಾಗೂ ಕೆ.ವಿ.ಪ್ರಭಾಕರ್ ಅವರಿಗೆ ಈ ಹುದ್ದೆಗಳನ್ನು ಸೃಜಿಸಿ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ಇವರಿಗೆ ನೀಡಲಾಗುವ ಸಂಬಳ, ಸಾರಿಗೆ, ವಸತಿ ಭತ್ಯೆ ಇತ್ಯಾದಿ ಖರ್ಚುಗಳು ರಾಜ್ಯದ ಬೊಕ್ಕಸದಿಂದ ವಿನಾ ಕಾರಣ ಭರಿಸುವಂತಾಗಿದೆ. ಇವೆಲ್ಲ ರಾಜಕೀಯ ನೇಮಕಾತಿ ಹಾಗೂ ಏಕಪಕ್ಷೀಯ ನಿರ್ಧಾರಗಳು. ಮುಖ್ಯಮಂತ್ರಿಗಳ ಕಚೇರಿ ಎಂಬುದು ಸಾರ್ವಜನಿಕ ಕಚೇರಿ. ಆದರೆ, ಇಲ್ಲೀಗ ಮುಖ್ಯಮಂತ್ರಿಗಳ ಬಂಧುಗಳು, ಅವರ ರಾಜಕೀಯ ಬೆಂಬಲಿಗರಿಗೆ ಆಸ್ಪದ ನೀಡಲಾಗಿದೆ. ಕಾನೂನಿನಲ್ಲಿ ಇಂತಹ ಹುದ್ದೆಗಳನ್ನು ರೂಪಿಸಲು ಅವಕಾಶವಿಲ್ಲ.