ಕರ್ನಾಟಕ

karnataka

ಭೂಸುಧಾರಣಾ ಕಾಯ್ದೆ ತಿದ್ದುಪಡಿ ಪ್ರಶ್ನಿಸಿ ಪಿಐಎಲ್​​: ಹೈಕೋರ್ಟ್ ಮಧ್ಯಂತರ ಆದೇಶ

By

Published : Oct 14, 2020, 9:22 AM IST

ಭೂ ಸುಧಾರಣಾ ಕಾಯ್ದೆಯ ನಿಯಮಗಳಿಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದು ಹೊರಡಿಸಿರುವ ಸುಗ್ರೀವಾಜ್ಞೆ ಅನುಸಾರ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳು ಕೈಗೊಳ್ಳುವ ಕ್ರಮಗಳು ಅರ್ಜಿ ಸಂಬಂಧ ನ್ಯಾಯಾಲಯ ನೀಡುವ ಅಂತಿಮ ತೀರ್ಪಿಗೆ ಒಳಪಟ್ಟಿರಲಿವೆ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

PIL for Land Amendment Amendment
ಭೂಸುಧಾರಣಾ ಕಾಯ್ದೆ ತಿದ್ದುಪಡಿ ಪ್ರಶ್ನಿಸಿ ಪಿಐಎಲ್ : ಹೈಕೋರ್ಟ್ ಮಧ್ಯಂತರ ಆದೇಶ

ಬೆಂಗಳೂರು: ಭೂ ಸುಧಾರಣಾ ಕಾಯ್ದೆಯ ನಿಯಮಗಳಿಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದು ಹೊರಡಿಸಿರುವ ಸುಗ್ರೀವಾಜ್ಞೆ ಅನುಸಾರ ಜಿಲ್ಲಾಧಿಕಾರಿಗಳು ಹಾಗೂ ಉಪ ವಿಭಾಗಾಧಿಕಾರಿಗಳು ಕೈಗೊಳ್ಳುವ ಕ್ರಮಗಳು ಅರ್ಜಿ ಸಂಬಂಧ ನ್ಯಾಯಾಲಯ ನೀಡುವ ಅಂತಿಮ ತೀರ್ಪಿಗೆ ಒಳಪಟ್ಟಿರಲಿವೆ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ರದ್ದುಪಡಿಸಲು ಕೋರಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಮಾಹಿತಿ ನೀಡಿದ್ದು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ 2020ರ ಜುಲೈ 14ರಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ತಿದ್ದುಪಡಿ ಸುಗ್ರೀವಾಜ್ಞೆ ಅನುಸಾರ ಭೂ ಸುಧಾರಣಾ ಕಾಯ್ದೆಯ ಸೆಕ್ಷನ್ 79a 79b ಉಲ್ಲಂಘನೆ ಅಡಿ ದಾಖಲಾಗಿರುವ ಪ್ರಕರಣಗಳನ್ನು ಕೂಡಲೇ ವಿಲೇವಾರಿ ಮಾಡಲು ಜಿಲ್ಲಾಧಿಕಾರಿ ಮತ್ತು ಉಪ ವಿಭಾಗಾಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಅದರಂತೆ ಭೂಮಿ ತಂತ್ರಾಂಶದಲ್ಲಿ ಮಾರ್ಪಾಡುಗಳನ್ನು ಮಾಡಲು ಮುಂದಾಗಿದ್ದಾರೆ ಎಂದು ತಿಳಿಸಿದರು.

ಹೇಳಿಕೆ ದಾಖಲಿಸಿಕೊಂಡ ಪೀಠ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಬರೆದ ಪತ್ರ ಆಧರಿಸಿ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್ ಗಳು ಯಾವುದೇ ಕ್ರಮ ಜರುಗಿಸಿದರೂ ಆ ಎಲ್ಲಾ ಕ್ರಮಗಳು ಅರ್ಜಿ ಸಂಬಂಧ ನ್ಯಾಯಾಲಯ ನೀಡುವ ಅಂತಿಮ ತೀರ್ಪಿಗೆ ಒಳಪಟ್ಟಿರಲಿವೆ ಎಂದು ಮಧ್ಯಂತರ ಆದೇಶ ನೀಡಿ ವಿಚಾರಣೆ ಮುಂದೂಡಿತು.

ಇದಕ್ಕೂ ಮುನ್ನ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಸುಗ್ರೀವಾಜ್ಞೆಗೆ ಸಂಬಂಧಿಸಿದ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಳ್ಳಲಾಗಿದೆ. ಆದರೆ, ವಿಧಾನಪರಿಷತ್ತಿನಲ್ಲಿ ಅಂಗೀಕಾರ ದೊರೆತಿಲ್ಲ. ಸಂವಿಧಾನದ ವಿಧಿ 213 ರ ಪ್ರಕಾರ ಅಧಿವೇಶನ ಆರಂಭಗೊಂಡ ಆರು ವಾರಗಳ ಒಳಗೆ ವಿಧೇಯಕಕ್ಕೆ ವಿಧಾನ ಮಂಡಲದಲ್ಲಿ ಅನುಮೋದನೆ ಪಡೆದು ಕೊಳ್ಳಬೇಕು. ಅದರಂತೆ ಸೆಪ್ಟೆಂಬರ್ 21ರಂದು ಅಧಿವೇಶನ ಆರಂಭಗೊಂಡಿದ್ದು, ನವೆಂಬರ್ 2 ಒಳಗೆ ಅನುಮೋದನೆ ಪಡೆಯಬೇಕಿದೆ. ಇಲ್ಲವಾದಲ್ಲಿ ಸುಗ್ರೀವಾಜ್ಞೆ ತನ್ನಿಂದತಾನೇ ರದ್ದಾಗಲಿದೆ ಎಂದು ತಿಳಿಸಿದರು.

ABOUT THE AUTHOR

...view details