ಬೆಂಗಳೂರು:ಭೂ ಸುಧಾರಣಾ ಕಾಯ್ದೆಯ ನಿಯಮಗಳಿಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿರುವ ವಿಚಾರಕ್ಕೆ ಸಂಬಂಧಿಸಿದ ವಸ್ತುಸ್ಥಿತಿ ಮಾಹಿತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಕಾಯ್ದೆಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲಕಾಲ ಅರ್ಜಿದಾರರ ಪರ ವಕೀಲ ಪ್ರೊ. ರವಿವರ್ಮ ಕುಮಾರ್ ವಾದ ಆಲಿಸಿದ ಪೀಠ, ಅರ್ಜಿ ಸಂಬಂಧ ವಿವರಣೆ ಕೇಳಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿತು. ಅಲ್ಲದೇ, ಕಾಯ್ದೆಯ ನಿಯಮಗಳಿಗೆ ತಿದ್ದುಪಡಿ ತಂದಿರುವ ಬಗ್ಗೆ ವಿಧಾನಮಂಡಲದ ಉಭಯ ಸದನಗಳಲ್ಲಿ ಅನುಮೋದನೆ ಪಡೆದು ಕಾಯ್ದೆ ಆಗಿದೆಯೇ ಅಥವಾ ಇನ್ನೂ ಸುಗ್ರೀವಾಜ್ಞೆ ಆಗಿಯೇ ಮುಂದುವರೆದಿದೆಯೇ ಎಂಬ ಬಗ್ಗೆ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 13ಕ್ಕೆ ಮುಂದೂಡಿತು.