ಬೆಂಗಳೂರು :ಕೇರಳದ ಕಾಸರಗೋಡು ಹಾಗೂ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ ನಡುವೆ ಸಾರ್ವಜನಿಕರ ಸಂಚಾರ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.
ಕಾಸರಗೋಡಿನ ವಕೀಲ ಬಿ. ಸುಬ್ಬಯ್ಯ ರೈ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ಕೇಂದ್ರ ಗೃಹ ಸಚಿವಾಲಯ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ಅರ್ಜಿದಾರರ ಕೋರಿಕೆ, ಕೋವಿಡ್-19 ಹಿನ್ನೆಲೆ ವಿಧಿಸಲಾಗಿದ್ದ ಲಾಕ್ಡೌನ್ನ್ನು ಕೇಂದ್ರ ಸರ್ಕಾರ ಹಂತ ಹಂತವಾಗಿ ತೆರವು ಮಾಡಿದೆ. 2021ರ ಜ.27ರಂದು ಹೊರಡಿಸಿರುವ ಅನ್ ಲಾಕ್ ಮಾರ್ಗಸೂಚಿಗಳ ಪ್ರಕಾರ ಅಂತರ ರಾಜ್ಯ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ. ಫೆ.18ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೇರಳದ ಕಾಸರಗೋಡು ಹಾಗೂ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆ ನಡುವೆ ಸಾರ್ವಜನಿಕರ ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಈ ಆದೇಶ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ.
ಕೇರಳ-ಕರ್ನಾಟಕ ಗಡಿಭಾಗದ ಜಿಲ್ಲೆಗಳ ನಡುವೆ ನಿತ್ಯವೂ 80 ಸಾವಿರ ಜನ ಕಾಲೇಜು-ಶಾಲೆ, ವೈದ್ಯಕೀಯ ಸೇವೆಗಳು ಮತ್ತು ವಾಣಿಜ್ಯ ಉದ್ದೇಶಗಳಿಗೆ ಸಂಚರಿಸುತ್ತಾರೆ. ಇದೀಗ ಸಂಚಾರ ನಿರ್ಬಂಧಿಸಿರುವುದರಿಂದ ಈ ಮಾರ್ಗದಲ್ಲಿ ನಿತ್ಯ ಸಂಚರಿಸುವ ಜನರಿಗೆ ತೊಂದರೆ ಉಂಟಾಗುತ್ತಿದೆ. ಆದ್ದರಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಫೆ.18ರಂದು ಹೊರಡಿಸಿರುವ ಆದೇಶವನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಅರ್ಜಿ ಇತ್ಯರ್ಥವಾಗುವರೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಮಧ್ಯಂತರ ಮನವಿ ಮಾಡಿದ್ದಾರೆ.