ಬೆಂಗಳೂರು :ನಗರದ ವರ್ತೂರು ಹೋಬಳಿಯ ಮುಳ್ಳೂರು ಗ್ರಾಮದ ಸರ್ಕಾರಿ ಜಮೀನನ್ನು ಕಾನೂನು ಬಾಹಿರವಾಗಿ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಲು ಸರ್ಕಾರಿ ಅಧಿಕಾರಿಗಳು ಸಹಕರಿಸಿದ್ದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ನಗರದ ಸಾಮಾಜಿಕ ಕಾರ್ಯಕರ್ತ ಕೃಷ್ಣ ರಾಮಯ್ಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ನಗರ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿತು. ಅಲ್ಲದೆ ಪ್ರಕರಣದ ತನಿಖಾ ವರದಿಯನ್ನು ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿ ವಿಚಾರಣೆಯನ್ನು ಸೆ. 10ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ:
ಮುಳ್ಳೂರು ಗ್ರಾಮದ ಸರ್ವೆ ನಂಬರ್ 49 ರಲ್ಲಿರುವ ಸರ್ಕಾರಿ ಭೂಮಿಯನ್ನು ಕಂದಾಯ ಇಲಾಖೆ ಅಧಿಕಾರಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಖಾಸಗಿ ವ್ಯಕ್ತಿಗಳಿಗೆ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಪ್ರಾದೇಶಿಕ ಆಯುಕ್ತರು ವಿಚಾರಣೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಹಾಗೂ ಸೇವೆಯಿಂದ ಅಮಾನತು ಮಾಡಲು ಆದೇಶಿಸಿದ್ದರು.
ಆಯುಕ್ತರ ಆದೇಶದಂತೆ ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರು 2019ರ ಡಿಸೆಂಬರ್ 11ರಂದು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಆದರೆ ಪ್ರಕರಣದ ಸಂಬಂಧ ಇದುವರೆಗೆ ಯಾವುದೇ ತನಿಖೆ ನಡೆಸಿಲ್ಲ ಮತ್ತು ಆರೋಪಿತ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಹೀಗಾಗಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಹಾಗೂ ತನಿಖೆಯನ್ನು ಪಾರದರ್ಶಕವಾಗಿ ನಡೆಸಲು ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕು ಎಂದು ಅರ್ಜಿದಾರರು ಹೈಕೋರ್ಟಿಗೆ ಮನವಿ ಮಾಡಿದ್ದಾರೆ.