ಬೆಂಗಳೂರು :ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳ ಗುಣಾತ್ಮಕ ಶಿಕ್ಷಣ, ಉತ್ತಮ ನಿರ್ವಹಣೆ, ಕಟ್ಟಡಗಳ ನಿರ್ಮಾಣ ಸೇರಿ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ 1,365 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.
ವಿಕಾಸಸೌಧದಲ್ಲಿಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 74ನೇ ಆಡಳಿತ ಮಂಡಳಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಡಿಸಿಎಂ ಗೋವಿಂದ ಕಾರಜೋಳ, ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ, ಶೈಕ್ಷಣಿಕ ಅಭಿವೃದ್ಧಿಗಾಗಿ ಶಿಕ್ಷಣ ತಜ್ಞರಾದ ಡಾ. ಗುರುರಾಜ ಕರ್ಜಗಿಯವರನ್ನು ಶೈಕ್ಷಣಿಕ ಸಲಹೆಗಾರರನ್ನಾಗಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಬೆಳ್ಳಿಶೆಟ್ಟಿ ಅವರನ್ನು ಸಮಾಲೋಚಕರನ್ನಾಗಿ ನೇಮಿಸಲು ತೀರ್ಮಾಸಿದರು.