ಬೆಂಗಳೂರು:ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ಏರೊಸ್ಪೇಸ್ ಪಾರ್ಕ್‌ನಲ್ಲಿ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕ್ಯಾಂಪಸ್ಅನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್.ಅಶೋಕ ಮತ್ತು ವಿಮಾನ ತಯಾರಕ ಕಂಪನಿಯಾದ ಬೋಯಿಂಗ್‌ನ ಅಧಿಕಾರಿಗಳು ಉಪಸ್ಥಿತರಿದ್ದರು.
ಇಂದು ಬೆಳಗ್ಗೆ ವಿಶೇಷ ವಿಮಾನದಲ್ಲಿ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ್ದ ಮೋದಿ ಅಲ್ಲಿಂದ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ತೆರಳಿದ್ದರು. ಅಲ್ಲಿ ಸುಮಾರು 2,000 ಕೋಟಿ ರೂಪಾಯಿ ವೆಚ್ಚದ ಎಂಟು ಅಮೃತ್ ಯೋಜನೆಗಳ ಶಂಕುಸ್ಥಾಪನೆ ಮತ್ತು ರಾಜ್ಯದಲ್ಲಿ ಪಿಎಂಎವೈ - ನಗರ ಯೋಜನೆ ಅಡಿಯಲ್ಲಿ ಪೂರ್ಣಗೊಂಡ 90,000ಕ್ಕೂ ಹೆಚ್ಚು ಮನೆಗಳನ್ನು ಹಸ್ತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೆ ಚಾಲನೆ: ಅಲ್ಲಿಂದ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ, ಬೋಯಿಂಗ್‌ನ ಹೊಸ ಅತ್ಯಾಧುನಿಕ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಇದೇ ವೇಳೆ, ದೇಶದಲ್ಲಿ ವಿಮಾನಯಾನ ಕ್ಷೇತ್ರದಲ್ಲಿ ಮಹಿಳೆಯರ ಸಬಲೀಕರಣಗೊಳಿಸುವ ಉದ್ದೇಶದಿಂದ ಮೋದಿ ಬೋಯಿಂಗ್ ಸುಕನ್ಯಾ ಕಾರ್ಯಕ್ರಮಕ್ಕೂ ಚಾಲನೆ ನೀಡಿದರು. ಈ ಸುಕನ್ಯಾ ಕಾರ್ಯಕ್ರಮವು ದೇಶದ ಬೆಳೆಯುತ್ತಿರುವ ವಾಯುಯಾನ ಕ್ಷೇತ್ರಕ್ಕೆ ದೇಶದಾದ್ಯಂತ ಹೆಚ್ಚಿನ ಬಾಲಕಿಯರ ಪ್ರವೇಶವನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ.