ಬೆಂಗಳೂರು: ರಾಜ್ಯದಲ್ಲಿ ಬಡ, ಹಿಂದುಳಿದ ಮತ್ತು ಮಧ್ಯಮವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧ ಮತ್ತು ಶಸ್ತ್ರಚಿಕಿತ್ಸೆಯ ಪರಿಕರ ಒದಗಿಸುವ ದೃಷ್ಟಿಯಿಂದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಜಾರಿಯಾಗಿದೆ. ಈ ವರೆಗೆ 1052 ಜನೌಷಧ ಮಳಿಗೆಗಳನ್ನು ತೆರೆಯಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.
ಕರ್ನಾಟಕಕ್ಕೆ ಎರಡನೇ ಸ್ಥಾನ:ಇಡೀ ದೇಶದಲ್ಲಿ ಉತ್ತರ ಪ್ರದೇಶದ ನಂತರ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕೇರಳ ಮೂರನೇ ಸ್ಥಾನದಲ್ಲಿದೆ. ಗ್ರಾಮೀಣ ಪ್ರದೇಶದಲ್ಲೂ ಜನೌಷಧಿ ಕೇಂದ್ರ ಮಳಿಗೆಗಳನ್ನು ತೆರೆಯಲು ಸರ್ಕಾರ ಕಾರ್ನೋನ್ಮುಖವಾಗಿದೆ. ಪ್ರಸ್ತುತ ರಾಜ್ಯದಲ್ಲಿ ಹೊಸದಾಗಿ ಮತ್ತೆ 500 ಮಳಿಗೆಗಳನ್ನು ತೆರೆಯುವ ಉದ್ದೇಶವಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 40 ಹೊಸ ಮಳಿಗೆಗಳಿಗೆ ಅನುಮತಿ ನೀಡುವಂತೆ ಬಿಪಿಪಿಐಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಈ ವರ್ಷದ ಫೆಬ್ರವರಿ ನಂತರ ಸುಮಾರು 300 ಮಳಿಗೆಗಳನ್ನು ತೆರೆಯಲಾಗಿದ್ದು, ಬೇಡಿಕೆಗಳಿಗೆ ಅನುಗುಣವಾಗಿ ಮಳಿಗೆ ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಪಿಎಂ ಜನೌಷಧಿ ಮಳಿಗೆ ಅತ್ಯುತ್ತಮ:ರಾಜ್ಯದಲ್ಲಿ ಜನೌಷಧ ಮಳಿಗೆಗಳು ಅತ್ಯುತ್ತಮ ವಾಗಿ ಕಾರ್ಯನಿರ್ವಹಿಸುತ್ತಿವೆ. ಹೊಸದಾಗಿ ಪ್ರಸ್ತಾವನೆ ಸಲ್ಲಿಸಿರುವುದನ್ನು ಹೊರತುಪಡಿಸಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸುಮಾರು 200 ಔಷಧ ಮಳಿಗೆಗಳಿವೆ. ಉತ್ತರ ಕರ್ನಾಟಕ, ಹಳೆ ಮೈಸೂರು ಭಾಗದಿಂದಲೂ ಜನೌಷಧ ಮಳಿಗೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ತೆರೆಯಲು ಒತ್ತಡವಿದೆ.
ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಎಂಬ ಗ್ರಾಮದಲ್ಲೂ ಜನೌಷಧಿ ಮಳಿಗೆ ತೆರೆದಿರುವುದು ವಿಶೇಷ, ಬೇಡಿಕೆಗೆ ಅನುಗುಣವಾಗಿ ಹೊಸ ಮಳಿಗೆಗಳಿಗೆ ಮಂಜೂರಾತಿ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.