ಬೆಂಗಳೂರು:ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಸಂಘಟನಾತ್ಮಕ ಚಟುವಟಿಕೆಗಳು ಆರಂಭಗೊಳ್ಳಲಿವೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರತ್ಯೇಕವಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಇದರ ಜೊತೆಗೆ, ರಾಜ್ಯ ಬಿಜೆಪಿ ನಾಯಕರ ಪ್ರವಾಸ, ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯೂ ನಡೆಯುತ್ತಿದ್ದು, ಕೇಸರಿ ಪಡೆಗೆ ಹೊಸ ಉತ್ಸಾಹ ತರಲಿದೆ.
ಬೆಂಗಳೂರಿಗೆ ಅಮಿತ್ ಶಾ:ಮಾರ್ಚ್ 31ರಂದು ಬೆಂಗಳೂರಿಗೆ ಅಮಿತ್ ಶಾ ಆಗಮಿಸಲಿದ್ದು, ಪಕ್ಷದ ಮುಖಂಡರೊಂದಿಗೆ ಸಭೆ ನಡೆಸುವರು. ಏಪ್ರಿಲ್ 01ರಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಹುಟ್ಟುಹಬ್ಬ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ನಂತರ ಮುದ್ದೇನಹಳ್ಳಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಸಹಕಾರ ಇಲಾಖೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಕ್ಷೀರ ಬ್ಯಾಂಕ್ ಉದ್ಘಾಟನೆ ಮಾಡಲಿದ್ದಾರೆ. ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಪಕ್ಷದ ಕೋರ್ ಕಮಿಟಿ ಸಭೆ ನಡೆಸಿ ಮಹತ್ವದ ಮಾತುಕತೆ ನಡೆಸಲಿದ್ದಾರೆ.
ಮೋದಿ ರಾಜ್ಯ ಪ್ರವಾಸ:ಏಪ್ರಿಲ್ 05 ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಹಾಗೂ ಬೆಂಗಳೂರು ಉಪನಗರ ರೈಲು ಯೋಜನೆಗೆ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ವೇಳಾಪಟ್ಟಿ, ಸಮಯ ಇನ್ನೂ ಅಂತಿಮಗೊಳ್ಳಬೇಕಿದೆ.