ಬೆಂಗಳೂರು: ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ವಿವಿಧ ರಾಜ್ಯಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಕ್ರಾಮಿಕದ ನಿಯಂತ್ರಣದೊಂದಿಗೆ ಆರ್ಥಿಕ ಚಟುವಟಿಕೆಗಳ ಪುನಶ್ಚೇತನಕ್ಕೆ ಒತ್ತು ನೀಡುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಇಂದು ಪ್ರಧಾನಿ ನರೇಂದ್ರ ಮೋದಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. ರಾಜ್ಯದ ಪರಿಸ್ಥಿತಿ ಬಗ್ಗೆ ಮೊದಲು ಸಿಎಂ ಹತ್ತು ನಿಮಿಷಗಳ ಕಾಲ ಪ್ರಧಾನಿಯವರಿಗೆ ವಿವರಣೆ ನೀಡಿದರು. ಬಳಿಕ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸುಮಾರು 15 ನಿಮಿಷಗಳ ಕಾಲ ಕೊರೊನಾ ಪರಿಸ್ಥಿತಿ ಬಗ್ಗೆ ಪಿಪಿಟಿ ಪ್ರೆಸೆಂಟೇಷನ್ ನೀಡಿದರು. ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳು, ಸದ್ಯ ರಾಜ್ಯದಲ್ಲಿ ಕೊರೋನಾ ಸೋಂಕು, ಸಾವು, ಪರೀಕ್ಷೆಗಳ ಬಗ್ಗೆ ವಿವರಣೆ ನೀಡಿದರು.
ವೀಡಿಯೋ ಸಂವಾದದಲ್ಲಿ ಮೊದಲು ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ಕೋವಿಡ್ 19 ನಿಯಂತ್ರಣಕ್ಕಾಗಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡಿರುವ 5ಟಿ ತತ್ವವನ್ನು ವಿವರಿಸಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ನಿರಂತರವಾಗಿ ಸೋಂಕಿತರು, ಸಂಪರ್ಕಿತರನ್ನು ಪತ್ತೆ ಹಚ್ಚಿ ಪರೀಕ್ಷೆ ನಡೆಸಿ, ಚಿಕಿತ್ಸೆ ನೀಡುವುದರೊಂದಿಗೆ ತಂತ್ರಜ್ಞಾನದ ಸದ್ಬಳಕೆ ಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಪ್ರಸ್ತುತ ಒಂದು ಲಕ್ಷ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯ ಮೂಲಸೌಕರ್ಯ ಒದಗಿಸಲಾಗಿದ್ದು, ಇದನ್ನು 2 ಲಕ್ಷಕ್ಕೆ ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ. ರಾಜ್ಯದಲ್ಲಿ 673 ಫೀವರ್ ಕ್ಲಿನಿಕ್ಗಳನ್ನು ಸ್ಥಾಪಿಸುವ ಮೂಲಕ ಆಸ್ಪತ್ರೆಗಳು ಸೋಂಕು ಹರಡುವ ತಾಣವಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿರುವ 1.68 ಕೋಟಿ ಕುಟುಂಬಗಳಲ್ಲಿ 1.5 ಕೋಟಿ ಕುಟುಂಬಗಳ ಸಮೀಕ್ಷೆ ನಡೆಸಿದ್ದು, ಕೋವಿಡ್ ಸೋಂಕಿನಿಂದ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುವ ವ್ಯಕ್ತಿಗಳ ಮಾಹಿತಿಯನ್ನು ದಾಖಲಿಸಲಾಗಿದೆ. ಇದರಿಂದ ಮುನ್ನೆಚ್ಚರಿಕೆ ವಹಿಸಲು ಹಾಗೂ ಇಂತಹ ವ್ಯಕ್ತಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಲು ಸಾಧ್ಯವಾಗಿದೆ ಎಂದು ವಿವರಿಸಿದರು. ರಾಜ್ಯದಲ್ಲಿ ಕೋವಿಡ್ ಸೋಂಕು ಪರೀಕ್ಷೆ ನಡೆಸುವ ಪ್ರಯೋಗಾಲಯಗಳ ಸಂಖ್ಯೆ 72ಕ್ಕೆ ಹೆಚ್ಚಿದ್ದು, ಪರೀಕ್ಷಾ ಸಾಮರ್ಥ್ಯ ದಿನಕ್ಕೆ 15 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪ್ರತಿ ದಶಲಕ್ಷ ಜನಸಂಖ್ಯೆಗೆ ರಾಜ್ಯದಲ್ಲಿ 7,500 ಪರೀಕ್ಷೆ ನಡೆಸಲಾಗುತ್ತಿದ್ದು, ಶೇ. 1.6 ರಷ್ಟು ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ದೈನಂದಿನ ಬೆಳವಣಿಗೆ ದರ ಶೇಕಡಾ 3.6 ರಷ್ಟಿದೆ ಎಂದು ಪ್ರಧಾನಿ ಮೋದಿಗೆ ಮಾಹಿತಿ ನೀಡಿದರು.