ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯಜೀ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ಜೀ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು ಎಂದು ಪ್ರಧಾನಿ ಮೋದಿ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಟ್ವೀಟ್ ಮಾಡಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಹ ಟ್ವೀಟ್ ಮಾಡಿದ್ದು, ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದಾರೆ.
ಜನಹಿತದ ಕ್ರಮಕ್ಕೆ ಬೆಂಬಲ - ಹೆಚ್ಡಿಕೆ: ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳೆಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡ ನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜೆಡಿಎಸ್ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ಹೆಚ್ಡಿಕೆ ತಿಳಿಸಿದ್ದಾರೆ.