ಕರ್ನಾಟಕ

karnataka

ಪ್ರತಿ ದಿನ 5 ಲಕ್ಷದಂತೆ ತಿಂಗಳಿಗೆ 1.5 ಕೋಟಿ ಡೋಸ್ ಲಸಿಕೆ ಒದಗಿಸಲು ಪಿಎಂಗೆ ಸಿಎಂ ಮನವಿ

By

Published : Jul 16, 2021, 3:19 PM IST

ಪ್ರಸ್ತುತ 3ನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಎಲ್ಲ ಆರೋಗ್ಯ ಸೇವಾ ಸಂಸ್ಥೆಗಳಲ್ಲಿ ಆಕ್ಸಿಜನ್‌ಯುಕ್ತ ಬೆಡ್‌ಗಳು, ವೆಂಟಿಲೇಟರ್ ಬೆಡ್​ಗಳು ಹಾಗೂ ಮಕ್ಕಳ ಐಸಿಯುಗಳು ಮೊದಲಾದ ಸೌಲಭ್ಯ ಹೆಚ್ಚಿಸಲಾಗುತ್ತಿದೆ. ವೈದ್ಯರು, ಸ್ಟಾಫ್ ನರ್ಸ್, ಪ್ರಯೋಗಾಲಯ ತಂತ್ರಜ್ಞರ ಸೇವೆ ಒದಗಿಸಲಾಗುತ್ತಿದೆ. ಜೊತೆಗೆ ಕೋವಿಡ್ ಚಿಕಿತ್ಸೆಗೆ ಅಗತ್ಯ ಪರಿಕರಗಳನ್ನೂ ಸಹ ಸಾಕಷ್ಟು ಸಂಖ್ಯೆಯಲ್ಲಿ ಖರೀದಿಸಲಾಗುತ್ತಿದೆ..

PM Video conference  with CMs on Covid Condition
ಪಿಎಂಗೆ ಸಿಎಂ ಮನವಿ

ಬೆಂಗಳೂರು :ಡಿಸೆಂಬರ್ ಅಂತ್ಯಕ್ಕೆ ರಾಜ್ಯದ ಎಲ್ಲರಿಗೂ ಲಸಿಕೆ ನೀಡುವ ಗುರಿ ಇರಿಸಿಕೊಳ್ಳಲಾಗಿದೆ. ರಾಜ್ಯದಲ್ಲಿ ಈವರೆಗೆ 2.62 ಕೋಟಿ ಲಸಿಕೆ ನೀಡಲಾಗಿದೆ. ಗುರಿ ತಲುಪಲು ಪ್ರತಿ ದಿನ 5 ಲಕ್ಷ ಡೋಸ್​ಗಳಂತೆ ತಿಂಗಳಿಗೆ 1.5 ಕೋಟಿ ಡೋಸ್ ಲಸಿಕೆ ಒದಗಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್-19 ಪರಿಸ್ಥಿತಿ ಕುರಿತಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್​ನಲ್ಲಿ ಗೃಹ ಕಚೇರಿ ಕೃಷ್ಣಾದಿಂದ ಭಾಗವಹಿಸಿ ಸಿಎಂ ಬಿಎಸ್‌ವೈ ಮಾತನಾಡಿದರು. ಇದಕ್ಕೂ ಮೊದಲು ಆರಂಭದಲ್ಲಿ ಕಾನ್ಫರೆನ್ಸ್ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 2ನೇ ಅಲೆ ನಿಯಂತ್ರಣಕ್ಕೆ ಬಂದಿದ್ದರೂ 3ನೇ ಅಲೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. ಆರೋಗ್ಯ ವ್ಯವಸ್ಥೆಯ ಮೂಲಸೌಕರ್ಯ ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.

ಯುರೋಪ್ ಮತ್ತಿತರ ರಾಷ್ಟ್ರಗಳಲ್ಲಿ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆ ನಮ್ಮ ದೇಶದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ರಾಜ್ಯಗಳ ಪಾತ್ರ ಇದರಲ್ಲಿ ಮಹತ್ವದ್ದಾಗಿದೆ. ಎಲ್ಲಾ ರಾಜ್ಯಗಳು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಕೈಗೊಳ್ಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಎರಡು ತಿಂಗಳ ಹಿಂದೆ ಗಂಭೀರ ಸ್ಥಿತಿ ಎದುರಿಸಿದ್ದರೂ 2ನೇ ಅಲೆ ಈಗ ರಾಜ್ಯದಲ್ಲಿ ನಿಯಂತ್ರಣದಲ್ಲಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗಿವೆ. ಈಗ ದಿನಕ್ಕೆ 1900ಕ್ಕೆ ಪ್ರಕರಣ ಇಳಿದಿವೆ. ಬೆಂಗಳೂರಿನಲ್ಲಿ ಸುಮಾರು 400ಕ್ಕೆ ಇಳಿದಿವೆ. ಪಾಸಿಟಿವಿಟಿ ದರ ಶೇ.1.42ರಷ್ಟಿದೆ. ಮರಣ ಪ್ರಮಾಣ ಶೇ.1.25ಕ್ಕೆ ಇಳಿದಿದೆ ಎಂದು ವಿವರಿಸಿದರು.

ಕೋವಿಡ್ ಪಾಸಿಟಿವಿಟಿ ದರ, ಪ್ರಕರಣಗಳ ಸಂಖ್ಯೆ ಹಾಗೂ ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯವನ್ನು ಆಧರಿಸಿ, ನಿರ್ಬಂಧಗಳನ್ನು ವಿಧಿಸಲು ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಕೋವಿಡ್ ಸೂಕ್ತ ನಡವಳಿಕೆಯನ್ನು ಖಾತರಿಪಡಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ಸಹ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಸಿಎಂ ಮಾಹಿತಿ ನೀಡಿದರು.

ಪ್ರಸ್ತುತ 3ನೇ ಅಲೆಯನ್ನು ಎದುರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಎಲ್ಲ ಆರೋಗ್ಯ ಸೇವಾ ಸಂಸ್ಥೆಗಳಲ್ಲಿ ಆಕ್ಸಿಜನ್‌ಯುಕ್ತ ಬೆಡ್‌ಗಳು, ವೆಂಟಿಲೇಟರ್ ಬೆಡ್​ಗಳು ಹಾಗೂ ಮಕ್ಕಳ ಐಸಿಯುಗಳು ಮೊದಲಾದ ಸೌಲಭ್ಯ ಹೆಚ್ಚಿಸಲಾಗುತ್ತಿದೆ. ವೈದ್ಯರು, ಸ್ಟಾಫ್ ನರ್ಸ್, ಪ್ರಯೋಗಾಲಯ ತಂತ್ರಜ್ಞರ ಸೇವೆ ಒದಗಿಸಲಾಗುತ್ತಿದೆ. ಜೊತೆಗೆ ಕೋವಿಡ್ ಚಿಕಿತ್ಸೆಗೆ ಅಗತ್ಯ ಪರಿಕರಗಳನ್ನೂ ಸಹ ಸಾಕಷ್ಟು ಸಂಖ್ಯೆಯಲ್ಲಿ ಖರೀದಿಸಲಾಗುತ್ತಿದೆ ಎಂದು ಹೇಳಿದರು.

ಹೊಸ ಆರ್​ಟಿಪಿಸಿಆರ್ ಪ್ರಯೋಗಾಲಯಗಳ ಸ್ಥಾಪನೆ ಹಾಗೂ ಜಿನೋಮ್ ಸಿಕ್ವೆನ್ಸಿಂಗ್ ಲ್ಯಾಬೊರೇಟರಿಗಳನ್ನು ಸ್ಥಾಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ 3ನೇ ಅಲೆ ಎದುರಿಸಲು ಕೇಂದ್ರ ಸರ್ಕಾರದಿಂದ ಲಸಿಕೆ ಹಂಚಿಕೆ ಹೆಚ್ಚಳ, 800 ನಿಯೊ-ನೇಟಲ್ ಮತ್ತು ಪಿಡಿಯಾಟ್ರಿಕ್ ವೆಂಟಿಲೇಟರ್​ಗಳನ್ನು ಪಿಎಂ-ಕೇರ್ಸ್ ಅಡಿ ಒದಗಿಸುವಂತೆ ಮನವಿ ಮಾಡಿದರು.

ತಾಲೂಕು ಆಸ್ಪತ್ರೆಗಳಿಗೆ 40 ಪಿಎಸ್​ಎ ಆಕ್ಸಿಜನ್ ಉತ್ಪಾದನಾ ಘಟಕಗಳ ಹಂಚಿಕೆ, ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಹಂಚಿಕೆಯ ವಿಕೇಂದ್ರೀಕರಣ ಮಾಡಬೇಕು. ಮ್ಯುಕೊರ್ಮೈಕೊಸಿಸ್ ಆಂಫೊಟೆರಿಸಿನ್-ಬಿ ಮತ್ತು ಮಕ್ಕಳಿಗೆ ಐವಿಐಜಿ ಹಂಚಿಕೆ ಹೆಚ್ಚಿಸಬೇಕೆಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ದೆಹಲಿಯಿಂದ ಭಾಗವಹಿಸಿದ್ದು, ಬೆಂಗಳೂರಿನಿಂದ ಉಪಮುಖ್ಯಮಂತ್ರಿ ಡಾ.ಸಿ ಎನ್ ಅಶ್ವತ್ಥ್‌ ನಾರಾಯಣ, ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಅರಣ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details