ಬೆಂಗಳೂರು : ಚುನಾವಣೆಯ ವಿವಿಧ ಜಾಗೃತ ದಳಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಮಾದರಿ ನೀತಿ ಸಂಹಿತೆ, ಚುನಾವಣಾ ವೆಚ್ಚ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲಂಘಿಸಿರುವ ಕುರಿತು ಮಾರ್ಚ್ 29 ರಿಂದ ಇಲ್ಲಿಯವರೆಗೆ ನಗದು, ಚಿನ್ನಾಭರಣ ಸೇರಿದಂತೆ ಈ ಕೆಳಗಿನ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಸೇರಿ ಒಟ್ಟು 22,75,42,568 ರೂ. ನಗದು ವಶಪಡಿಸಿಕೊಂಡಿವೆ. ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಸೇರಿ 24,45,85,370 ಮೌಲ್ಯದ 3,61,235 ಲೀಟರ್ ಮದ್ಯ ವಶಪಡಿಸಿಕೊಂಡಿವೆ. ಅದೇ ರೀತಿ 56,03,810 ಮೌಲ್ಯದ 101.34 ಕೆ.ಜಿ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿವೆ.
ವಿವಿಧ ಮಾದರಿಯ ವಾಹನಗಳ ವಶ : ಅಬಕಾರಿ ಇಲಾಖೆಯು 687 ಗಂಭೀರ ಪ್ರಕರಣಗಳನ್ನು ಹಾಗೂ ಮದ್ಯದ ಪರವಾನಿಗೆ ಉಲ್ಲಂಘಿಸಿದ 427 ಪ್ರಕರಣಗಳು, 16 ಎನ್ಡಿಪಿಎಸ್ ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1965ರ ಪರಿಚ್ಛೇದ 15 (ಎ) ಅನ್ವಯ ಒಟ್ಟು 1,560 ಪ್ರಕರಣಗಳನ್ನು ದಾಖಲಿಸಿವೆ ಮತ್ತು 357 ವಿವಿಧ ಮಾದರಿಯ ವಾಹನಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು ಸೇರಿ 8,71,97,033 ರೂ. ಮೌಲ್ಯದ 23.088 ಕೆಜಿ ಚಿನ್ನ, 84,27,980 ರೂ. ಮೌಲ್ಯದ 121.628 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಂಡಿವೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಅದೇ ರೀತಿ 12,02,60,706 ರೂ. ಮೌಲ್ಯದ ಉಚಿತ ಕೊಡುಗೆ ಉಡುಗೊರೆ ವಸ್ತುಗಳನ್ನು ವಶಪಡಿಸಿಕೊಂಡಿವೆ. ನಗದು, ಮದ್ಯ, ಮಾದಕ ದ್ರವ್ಯ, ಅಮೂಲ್ಯ ಲೋಹ ಮತ್ತು ಉಡುಗೊರೆ ವಸ್ತುಗಳನ್ನು ವಶಪಡಿಸಿಕೊಂಡಿರುವ ವಿಚಕ್ಷಣ ದಳ, ಸ್ಥಿರ ಕಣ್ಣಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 526 ಪ್ರಥಮ ತನಿಖಾ ವರದಿ (FIR) ದಾಖಲಿಸಿದ್ದಾರೆ.
ಚುನಾವಣೆ ಘೋಷಣೆಯಾದ ದಿನಾಂಕದಿಂದ ಇಲ್ಲಿಯವರೆಗೆ ಒಟ್ಟಾರೆ 43,052 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 10 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 11 ಶಸ್ತ್ರಾಸ್ತ್ರಗಳ ಪರವಾನಿಗೆ ರದ್ದುಪಡಿಸಲಾಗಿದೆ. ಸಿಆರ್ಪಿಸಿ ಕಾಯ್ದೆಯಡಿ 1,902 ಪ್ರಕರಣಗಳನ್ನು ದಾಖಲಿಸಲಾಗಿದೆ. ಅವುಗಳಲ್ಲಿ 2,735 ವ್ಯಕ್ತಿಗಳಿಂದ ಮುಚ್ಚಳಿಕೆ ಪತ್ರ ಪಡೆಯಲಾಗಿದೆ. 4,087 ಜಾಮೀನು ರಹಿತ ವಾರೆಂಟ್ಗಳನ್ನು ಜಾರಿಗೊಳಿಸಲಾಗಿದೆ. ಎಲ್ಲಾ ತಂಡಗಳು ಒಟ್ಟು ರೂ. 69,36,17,467 ಮೌಲ್ಯದ ನಗದು ಸೇರಿದಂತೆ ಮದ್ಯ, ಮಾದಕ ದ್ರವ್ಯ ಇತ್ಯಾದಿ ವಸ್ತುಗಳನ್ನು ವಶಪಡಿಸಿಕೊಂಡಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ವಿಶೇಷ ವರದಿ :ವಿಚಕ್ಷಣ ದಳವು ಬೆಳಗಾವಿ ಜಿಲ್ಲೆಯ ಬೆಳಗಾವಿ ಗ್ರಾಮಾಂತರ ವಿಧಾನಸಭೆ ಕ್ಷೇತ್ರದಲ್ಲಿ 2,00,00,000 ರೂ.ಗಳ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸ್ ಅಧಿಕಾರಿಗಳು ತುಮಕೂರು ಜಿಲ್ಲೆಯ ತುಮಕೂರು ಗ್ರಾಮಾಂತರ ವಿಧಾನಸಭೆ ಕ್ಷೇತ್ರದಲ್ಲಿ 56,00,000 ರೂ.ಗಳ ನಗದನ್ನು ವಶಪಡಿಸಿಕೊಂಡಿದ್ದಾರೆ. ಸ್ಥಿರ ಕಣ್ಗಾವಲು ತಂಡವು ದಾವಣಗೆರೆ ಜಿಲ್ಲೆಯ ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರದಲ್ಲಿ 32,32,008 ರೂ.ಗಳ ನಗದನ್ನು ವಶಪಡಿಸಿಕೊಂಡಿದೆ.