ಬೆಂಗಳೂರು: ಮಹಿಳೆ ಮೇಲೆ ನಡೆದ ಹಲ್ಲೆ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬಸ್ಥರಿಗಾಗಿ ವಿಶೇಷ ತನಿಖಾ ತಂಡ ರಚಿಸಿ ಶೋಧ ನಡೆಸುತ್ತಿರುವ ಪೊಲೀಸರಿಗೆ ಈವರೆಗೂ ಆರೋಪಿಗಳ ಬಗ್ಗೆ ಯಾವುದೇ ಸುಳಿವು ದೊರೆತಿಲ್ಲ.
ಪೊಲೀಸ್ ಆಯುಕ್ತ ಕಮಲ್ ಪಂತ್ ಪ್ರತಿಕ್ರಿಯೆ ಸೌಂದರ್ಯ ಜಗದೀಶ್ ಪತ್ನಿ ರೇಖಾ, ಪುತ್ರ ಸ್ನೇಹಿತ್, ಮನೆ ಕೆಲಸದಾಕೆ ಭುವನಾ ಸೇರಿದಂತೆ 9 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು, ತನಿಖೆ ಕೈಗೊಂಡಿರುವ ಪೊಲೀಸರು ನಿನ್ನೆಯಷ್ಟೇ ಸೌಂದರ್ಯ ಜಗದೀಶ್ ಮಾಲೀಕತ್ವದ ಪಬ್ ಮೇಲೆ ದಾಳಿ ಮಾಡಿ ಅಲ್ಲಿ ಸಿಬ್ಬಂದಿ ಹೇಳಿಕೆ ಪಡೆದುಕೊಂಡಿದ್ದರು. ಜೊತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನ ಜಪ್ತಿ ಮಾಡಿಕೊಂಡಿದ್ದರು.
ಸದ್ಯ ಎಸ್ಕೇಪ್ ಆಗಿರುವ ಆರೋಪಿಗಳೆಲ್ಲರೂ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡಿದ್ದಾರೆ. ತಾಂತ್ರಿಕ ತನಿಖೆಯಲ್ಲಿ ಮಂಗಳೂರಿನಲ್ಲಿ ಅಡಗಿಕೊಂಡಿರಬಹುದು ಎಂಬ ಶಂಕೆ ಹಿನ್ನೆಲೆಯಲ್ಲಿ, ವಿಶೇಷ ತಂಡ ಅಲ್ಲಿಗೆ ಹೋಗಿ ಶೋಧ ನಡೆಸುತ್ತಿದೆ. ಈ ಮಧ್ಯೆ ಮನೆಯ ಭದ್ರತಾ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಸೌಂದರ್ಯ ಜಗದೀಶ್ ಮನೆಯ ಬೌನ್ಸರ್ಗಳಿಗೂ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ತಾಕೀತು ಮಾಡಿದ್ದಾರೆ.
ರಾಜಕೀಯ ಪ್ರಭಾವಕ್ಕೆ ಪೊಲೀಸರು ಒಳಗಾಗಿದ್ದಾರೆ ಎಂಬ ಆರೋಪದ ಬೆನ್ನಲೇ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ತಲೆಮರೆಸಿಕೊಂಡಿರುವ ಆರೋಪಿಗಳೆಲ್ಲರೂ ಪಕ್ಕದ ಮನೆಯವರೊಂದಿಗೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ಮಾಡಿಕೊಂಡಿದ್ದಾರೆ. ಈ ಸಂಬಂಧ ಆರೋಪಿಗಳ ವಿರುದ್ಧ ಹಲ್ಲೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳು ಸ್ವಿಚ್ಡ್ ಆಫ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ.
ಆರೋಪಿಗಳ ಬಂಧನಕ್ಕಾಗಿ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಪ್ರಕರಣದ ಹಿಂದೆ ಯಾವುದೇ ರಾಜಕೀಯ ಒತ್ತಡವಿಲ್ಲ. ಮುಲಾಜಿಲ್ಲದೇ ಆರೋಪಿಗಳನ್ನು ಬಂಧಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಗರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೆಂದು ಮುಖರ್ಜಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಸದ್ಯದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು. ಪ್ರಕರಣದಲ್ಲಿ ಪೊಲೀಸರೇನಾದರೂ ನಿರ್ಲಕ್ಷ್ಯ ವಹಿಸಿದ್ದರೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಪೊಲೀಸರ ಕೈವಾಡವಿದ್ದರೆ ಕ್ರಮ ಗ್ಯಾರಂಟಿ :
ಇತ್ತೀಚೆಗೆ ಹೆಚ್ಎಸ್ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಪಬ್ ನಲ್ಲಿ ಗಲಾಟೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ ಬಗ್ಗೆ ಈಗಾಗಲೇ ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಘಟನೆ ಮುಚ್ಚಿ ಹಾಕುವಲ್ಲಿ ಪೊಲೀಸರ ಕೈವಾಡ ಇದ್ದರೆ ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ತನಿಖೆಯ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.