ಬೆಂಗಳೂರು: ಕೊರೊನಾ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ನಗರದ ಪೂರ್ವ ವಿಭಾಗದ ಪೊಲೀಸರು, ಸಾರ್ವಜನಿಕ ಸ್ಥಳಗಳು ಮಾತ್ರವಲ್ಲದೆ ಹೋಟೆಲ್, ಮಾಲ್, ರೆಸ್ಟೋರೆಂಟ್ ಸೇರಿದಂತೆ ವಾಣಿಜ್ಯ ಮಳಿಗೆಗಳ ಮೇಲೂ ದಾಳಿ ಮಾಡಿದ್ದಾರೆ.
ಗುರುವಾರ ವಿವಿಧ ಠಾಣಾ ವ್ಯಾಪ್ತಿಗಳಲ್ಲಿರುವ ವಾಣಿಜ್ಯ ಮಳಿಗೆಗಳು, ಹೋಟೆಲ್‌ಗಳು, ಅಂಗಡಿಗಳಿಗೆ ಪೊಲೀಸರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಮಾಸ್ಕ್ ಧರಿಸದ ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡದ ಪ್ರಕರಣಗಳಲ್ಲಿ ದಂಡ ವಿಧಿಸಿದ್ದಾರೆ. ಅಲ್ಲದೆ ಸಾಮಾಜಿಕ ಅಂತರ ಹಾಗೂ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸದೇ ಇದ್ದ 59 ವಾಣಿಜ್ಯ ಮಳಿಗೆಗಳನ್ನು ಪೊಲೀಸರು ತಾತ್ಕಾಲಿಕವಾಗಿ ಮುಚ್ಚಿಸಿದ್ದಾರೆ.
ಕಡ್ಡಾಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಉಚಿತವಾಗಿ ಮಾಸ್ಕ್ಗಳನ್ನು ವಿತರಿಸಲಾಗಿದೆ. ಹೀಗಾಗಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೊರೊನಾ ನಿಯಮ ಪಾಲನೆ ಬಗ್ಗೆ ಪೊಲೀಸರು ಜಾಗೃತಿ ಮೂಡಿಸಿದ್ದಾರೆ.