ಬೆಂಗಳೂರು:ಬೀದರ್ನ ಶಾಹೀನ್ ಶಾಲೆಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಿಎಂ ನಿವಾಸ ಧವಳಗಿರಿಗೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.
ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ಪೊಲೀಸ್ ಭದ್ರತೆ - ಸಿಎಂ ಬಿ. ಎಸ್.ಯಡಿಯೂರಪ್ಪ ನಿವಾಸ
ಬೀದರ್ನ ಶಾಹೀನ್ ಶಾಲೆಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸುವುದಾಗಿ ಹೇಳಿರುವ ಹಿನ್ನೆಲೆ ಸಿಎಂ ನಿವಾಸ ಧವಳಗಿರಿಗೆ ಹೆಚ್ಚಿನ ಪೊಲೀಸ್ ಭದ್ರತೆ ನೀಡಲಾಗಿದೆ.
ಶಾಹೀನ್ ಶಾಲೆಯಲ್ಲಿ ವಿದ್ಯಾರ್ಥಿಗಳು ಸಿಎಎ ವಿರೋಧಿಸಿ ನಾಟಕ ಪ್ರದರ್ಶನ ಮಾಡಿದ್ದನ್ನೇ ಆಧರಿಸಿ ಬೀದರ್ ಪೊಲೀಸರು ಶಾಲೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ಹೀಗೆ ಪೊಲೀಸ್ ವ್ಯವಸ್ಥೆಯನ್ನು ರಾಜ್ಯ ಬಿಜೆಪಿ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕರು ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸುವುದಾಗಿ ಹೇಳಿದ್ದಾರೆ. ನಗರದ ಮೌರ್ಯ ಸರ್ಕಲ್ನಿಂದ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸದವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿ, ಬಳಿಕ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ದತೆ ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ನಾಯಕರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಧವಳಗಿರಿಗೆ ಇಬ್ಬರು ಎಸಿಪಿಗಳ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸಿಎಂ ನಿವಾಸ, ಸುತ್ತಮುತ್ತ ಪೊಲೀಸ್ ಕಣ್ಗಾವಲು ಇರಿಸಲಾಗಿದ್ದು, ಸಿಎಂ ಭೇಟಿಗೆ ಬಂದು ಹೋಗುವವರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ.