ಬೆಂಗಳೂರು:ಮಾಜಿ ಸಚಿವ ವೈಜನಾಥ್ ಪಾಟೀಲ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಜೆಡಿಎಸ್ ಹಿರಿಯ ನಾಯಕ ಹೆಚ್. ಡಿ. ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ವೈಜನಾಥ್ ಪಾಟೀಲ್ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ ವೈಜನಾಥ ಪಾಟೀಲರ ನಿಧನದಿಂದ ತೀವ್ರ ದುಃಖವಾಗುತ್ತದೆ. ಕಲ್ಯಾಣ ಕರ್ನಾಟಕಕ್ಕೆ ಸಂವಿಧಾನದ 371(ಜೆ) ವಿಧಿಯ ಮುಖಾಂತರ ವಿಶೇಷ ಸ್ಥಾನಮಾನ ದೊರಕಿಸುವ ನಿಟ್ಟಿನಲ್ಲಿ ಇವರ ಪಾತ್ರ ಪ್ರಮುಖವಾಗಿತ್ತು. ಈ ಭಾಗದ ಅಭಿವೃದ್ಧಿಯ ಕುರಿತ ಅವರು ತೋರಿದ ಕಾಳಜಿ ಅನನ್ಯವಾದುದು. ಶಾಸಕರಾಗಿ ಹಾಗೂ ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ತೋಟಗಾರಿಕಾ ಸಚಿವರಾಗಿ ಮತ್ತು ದೇವೇಗೌಡರ ಸಂಪುಟದಲ್ಲಿ ನಗರಾಭಿವೃದ್ಧಿ ಸಚಿವರಾಗಿ ಅವರ ಕೊಡುಗೆಯೂ ಸ್ಮರಣೀಯ ಎಂದು ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಅವರ ನಿಧನದಿಂದ ಒಬ್ಬ ನೇರ ನಡೆ, ನುಡಿಯ ಹೋರಾಟಗಾರ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ ಎಂದಿರುವ ಮುಖ್ಯಮಂತ್ರಿಗಳು, ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
ಇದೇ ವೇಳೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಬೆಳಗ್ಗೆ ನಗರದ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಸಚಿವ ವೈಜನಾಥ ಪಾಟೀಲ್ ಅವರ ಅಂತಿಮ ದರ್ಶನ ಪಡೆದು, ಕುಟುಂಬದವರಿಗೆ ಸಾಂತ್ವನ ಹೇಳಿದರು.
ವೈಜನಾಥ್ ಪಾಟೀಲ್ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಸಂತಾಪ ಇನ್ನು ಮಾಜಿ ಸಚಿವ ವೈಜನಾಥ್ ಪಾಟೀಲ್ ಅವರ ನಿಧನಕ್ಕೆ ಜೆಡಿಎಸ್ ನಾಯಕರು ಸಂತಾಪ ಸೂಚಿಸಿದ್ದಾರೆ ವೈಜನಾಥ್ ಪಾಟೀಲ್ ಅವರ ಅಗಲಿಕೆ ಸುದ್ದಿ ಕೇಳಿ ದುಃಖವಾಗಿದೆ. ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಚಿವರಾಗಿ ಪಾಟೀಲರು ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತೇನೆ. ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ಭಗವಂತ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವೆ ಅಂತಾ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ವೈಜನಾಥ್ ಪಾಟೀಲ್ ನಿಧನಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಂತಾಪ ಮಾಜಿ ಸಚಿವ, 371 ಜೆ ವಿಧಿ ಹೋರಾಟಗಾರ. ವೈಜನಾಥ ಪಾಟೀಲರ ನಿಧನ ತೀವ್ರ ಬೇಸರ ತರಿಸಿದೆ. ಹೆಚ್.ಡಿ ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವೈಜನಾಥ ಪಾಟೀಲರ ಸಂಪುಟದಲ್ಲಿ ಸಚಿವರಾಗಿದ್ದರು. ಈಗಿನ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸದಾ ಮಿಡಿಯುತ್ತಿದ್ದರು. ಈ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಲು ಎರಡು ದಶಕಗಳ ಹಿಂದೆ ಧ್ವನಿ ಎತ್ತಿ ಹೋರಾಟ ಆರಂಭಿಸಿದ್ದೇ ಪಾಟೀಲರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುವೆ ಅಂತಾ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.