ಬೆಂಗಳೂರು:ಸಚಿವ ಸಂಪುಟ ವಿಸ್ತರಣೆ ದಿನಾಂಕ ನಿಗದಿಯಾದ ಹಿನ್ನೆಲೆ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸ ಧವಳಗಿರಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಮನೆ ಬಾಗಿಲಿಗೆ ಬಂದು ಹೋಗುತ್ತಿದ್ದಾರೆ.
ಸಿಎಂ ನಿವಾಸ ಧವಳಗಿರಿಯಲ್ಲಿ ಬಿರುಸುಗೊಂಡ ರಾಜಕೀಯ ಚಟುವಟಿಕೆ - ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸ
ಸಚಿವ ಸಂಪುಟ ವಿಸ್ತರಣೆ ದಿನಾಂಕ ನಿಗದಿಯಾದ ಹಿನ್ನೆಲೆ ಸಿಎಂ ನಿವಾಸ ಧವಳಗಿರಿಯಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳು ಸಿಎಂ ಮನೆ ಬಾಗಿಲಿಗೆ ಬಂದು ಹೋಗುತ್ತಿದ್ದಾರೆ.
10+3 ಸೂತ್ರದಂತೆ ಫೆಬ್ರವರಿ 6ರಂದು ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿನ್ನೆ ಅಧಿಕೃತವಾಗಿ ಪ್ರಕಟಿಸುತ್ತಿದ್ದಂತೆ ಸಚಿವಾಕಾಂಕ್ಷಿಗಳ ಲಾಬಿ ಜೋರಾಗಿದೆ. ನಿನ್ನೆಯಿಂದಲೂ ಸಿಎಂ ನಿವಾಸಕ್ಕೆ ಆಕಾಂಕ್ಷಿಗಳು ಭೇಟಿ ನೀಡಿ ಸಚಿವ ಸ್ಥಾನಕ್ಕೆ ಬೇಡಿಕೆ ಇಡುತ್ತಿದ್ದಾರೆ. ಬೆಳಗ್ಗೆಯೇ ಶಾಸಕ ನೆಹರೂ ಓಲೇಕಾರ್ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿದರು. ಹಿರಿತನದ ಆಧಾರದಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟರು ಎಂದು ತಿಳಿದು ಬಂದಿದೆ.
ನಂತರ ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಹಾಗೂ ಹೆಚ್.ವಿಶ್ವನಾಥ್ ಸಿಎಂ ನಿವಾಸಕ್ಕೆ ಭೇಟಿ ನೀಡಿದರು. ಈಗಾಗಲೇ ನಾರಾಯಣಗೌಡಗೆ ಸಚಿವ ಸ್ಥಾನ ಬಹುತೇಕ ಫಿಕ್ಸ್ ಆಗಿರುವ ಹಿನ್ನೆಲೆಯಲ್ಲಿ ಅನೌಪಚಾರಿಕವಾಗಿ ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿದರು. ಜೊತೆಗೆ ಅನರ್ಹ ಶಾಸಕ ವಿಶ್ವನಾಥ್ ಪರವೂ ಮಾತನಾಡಿದರು ಎನ್ನಲಾಗಿದೆ. ಆದರೆ ಕೊಟ್ಟ ಮಾತಿನಂತೆ ನಮಗೂ ಸಚಿವ ಸ್ಥಾನ ನೀಡಬೇಕು ಎಂದು ಸಿಎಂಗೆ ವಿಶ್ವನಾಥ್ ಇಂದೂ ಕೂಡ ಒತ್ತಾಯ ಮಾಡಿದರು. ಸೋತವರಿಗೆ ಮಂತ್ರಿ ಸ್ಥಾನ ಕೊಡಲು ಸಾಧ್ಯವಿಲ್ಲ ಎನ್ನುವ ಸಿಎಂ ಹೇಳಿಕೆ ಹಿನ್ನೆಲೆಯಲ್ಲಿ ಭೇಟಿ ಮಾಡಿ ಬೇಡಿಕೆ ಮಂಡಿಸಿದರು ಎನ್ನಲಾಗಿದೆ.