ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಕೊರೊನಾ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಅಹ್ಮದ್ ಪಟೇಲ್ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ನಿಧನದಿಂದ ತೀವ್ರ ದುಃಖವಾಯಿತು. ಅವರ ಕುಟುಂಬಕ್ಕೆ, ಅನುಯಾಯಿಗಳಿಗೆ, ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಓಂ ಶಾಂತಿ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ತಮ್ಮ ಸಂತಾಪ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ನನಗೆ ಆತ್ಮೀಯರಾಗಿದ್ದ ಅಹ್ಮದ್ ಪಟೇಲ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ದೀರ್ಘಕಾಲ ಸೋನಿಯಾ ಗಾಂಧಿಯವರ ರಾಜಕೀಯ ಕಾರ್ಯದರ್ಶಿಯಾಗಿದ್ದ ಪಟೇಲ್ ಪಕ್ಷಕ್ಕೆ ಆಧಾರ ಸ್ತಂಭವಾಗಿದ್ದರು. ಇವರ ಸಾವು ಪಕ್ಷಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬದ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದಿದ್ದಾರೆ.
ಅಹ್ಮದ್ ಪಟೇಲ್ ಅವರ ನಿಧನಕ್ಕೆ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡರು ಸಂತಾಪ ವ್ಯಕ್ತಪಡಿಸಿದ್ದಾರೆ. ಅಹ್ಮದ್ ಪಟೇಲ್ ಅವರ ಸಾವು ಆಘಾತ ತಂದಿದೆ. ಅವರ ನಿಧನದಿಂದ ದೇಶಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಟ್ವೀಟ್ ಮೂಲಕ ಹೇಳಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬ ವರ್ಗಕ್ಕೆ ಭಗವಂತ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸಹ ಸಂತಾಪ ಸೂಚಿಸಿದ್ದಾರೆ. ಪಟೇಲ್ ಅಗಲಿಕೆಯ ದುಃಖದ ಈ ಸಮಯದಲ್ಲಿ ಅವರ ಕುಟುಂಬದ ಸದಸ್ಯರು ಮತ್ತು ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿ ಸಿಗಲಿ, ಮೃತರ ಆತ್ಮಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಈ ಟ್ವೀಟ್ ಮಾಡಿದ್ದು, ಎಐಸಿಸಿ ಖಜಾಂಚಿ ಮತ್ತು ಕಾಂಗ್ರೆಸ್ ಪಕ್ಷದ ಅಗ್ರಗಣ್ಯ ನಾಯಕ ಅಹ್ಮದ್ ಪಟೇಲ್ ನಿಧನದ ಸುದ್ದಿ ಕೇಳಿ ತೀವ್ರ ದುಃಖ ಮತ್ತು ಆಘಾತ ಆಗಿದೆ. ಕಾಂಗ್ರೆಸ್ ಪಕ್ಷಕ್ಕೆ ಮತ್ತು ರಾಷ್ಟ್ರಕ್ಕೆ ಅವರ ಅಚಲ ನಿಷ್ಠೆ ಮತ್ತು ಕೊಡುಗೆ ಆದರ್ಶಪ್ರಾಯವಾಗಿದೆ ಮತ್ತು ನಮಗೆಲ್ಲರಿಗೂ ಸ್ಫೂರ್ತಿಯಾಗಿದ್ದರು. ಅವರು ಕಾಂಗ್ರೆಸ್ ಪಕ್ಷದ ಶಕ್ತಿಯಾಗಿದ್ದು, ತಮ್ಮ ಇಡೀ ಜೀವನವನ್ನು ಪಕ್ಷಕ್ಕೆ ಮುಡಿಪಾಗಿಟ್ಟ ನಿಷ್ಠಾವಂತ ನಾಯಕರು ಅವರು ಎಂದು ಸ್ಮರಿಸಿದರು. ಪಕ್ಷ ಸಂಕಷ್ಟದ ಪರಿಸ್ಥಿತಿಗೆ ಸಿಲುಕಿದಾಗಲೆಲ್ಲ ಬಲವಾಗಿ ನಿಲ್ಲುತ್ತಿದ್ದರು. ಪಕ್ಷಕ್ಕೆ ಆಧಾರ ಸ್ತಂಭದಂತಿದ್ದ ಹಿರಿಯ ನಾಯಕನ ಅಗಲಿಕೆ ಪಕ್ಷಕ್ಕೆ ಭರಿಸಲಾರದ ನಷ್ಟವಾಗಿದೆ ಎಂದು ದುಃಖಿಸಿದ್ದಾರೆ.