ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು, ಒಟ್ಟು 20 ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ. ಅಲ್ಲದೇ, 2047 ರ ವೇಳೆಗೆ ದೇಶದಲ್ಲಿ ಇಸ್ಲಾಮಿಕ್ ಆಡಳಿತ ರಚನೆ, ಕಿಲ್ಲರ್ ಸ್ಕ್ವಾಡ್, ಸರ್ವೀಸ್ ಟೀಂನಂತಹ ರಹಸ್ಯ ತಂಡಗಳನ್ನು ರಚಿಸಿಕೊಂಡು ಹತ್ಯೆ, ಹಲ್ಲೆಗಳನ್ನು ನಡೆಸುತ್ತಿತ್ತು ಎಂದು ಹೇಳಿದೆ. ಎನ್‌ಐಎ ಪರ ವಕೀಲರಾದ ಪಿ.ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದರು. ಇದುವರೆಗೆ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಆರೋಪಿಗಳಿಗಾಗಿ ಹುಡುಕಾಟ ಚುರುಕುಗೊಂಡಿದೆ.
ಆರೋಪಿ ಸುಳಿವು ಕೊಟ್ಟವರಿಗೆ ಬಹುಮಾನ: ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ತಾಲ್ಲೂಕಿನ ಕೊಡಾಜೆಯ ಅದ್ದ ಎಂಬವರ ಮಗ, ಮೊಹಮ್ಮದ್ ಶರೀಫ್ (53) ಮತ್ತು ನೆಕ್ಕಿಲಾಡಿಯ ಅಗ್ನಾಡಿ ಅಬೂಬಕರ್ ಎಂಬವರ ಮಗ ಕೆ.ಎ ಮಸೂದ್ (40) ಎಂಬವರ ಸುಳಿವು ನೀಡಿದವರಿಗೆ ತಲಾ 5 ಲಕ್ಷ ರೂ. ನಂತೆ ಒಟ್ಟು 10 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‌ಐಎ ಅಧಿಕಾರಿಗಳು ಘೋಷಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಎನ್‌ಐಎ ಅಧಿಕಾರಿಗಳು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಇಷ್ಟಾದರೂ ಕೆಲ ಆರೋಪಿಗಳ ಸುಳಿವು ಪತ್ತೆಯಾಗದ ಹಿನ್ನೆಲೆಯಲ್ಲಿ ಆರೋಪಿಗಳ ಮಾಹಿತಿ ನೀಡಿದವರಿಗೆ ಬಹುಮಾನ ನೀಡುವುದಾಗಿ ಘೋಷಿಸಿದೆ.
ಇದನ್ನೂ ಓದಿ:ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧಿಸಿದ ಎನ್‌ಐಎ
ಪ್ರಕರಣದ ಹಿನ್ನೆಲೆ: ಕಳೆದ ವರ್ಷ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಎಂಬವರ ಮೇಲೆ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ಪ್ರವೀಣ್ ಬೈಕ್‌ನಲ್ಲಿ ಮನೆಗೆ ಹೊರಡಲು ಸಿದ್ದರಾಗಿದ್ದಾಗ ಬೈಕ್‌ನಲ್ಲಿ ಆಗಮಿಸಿದ ಮುಸುಕುಧಾರಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಅವರು ಮಾರ್ಗಮಧ್ಯೆ ಮೃತಪಟ್ಟಿದ್ದರು.
ಪ್ರವೀಣ್ ಹತ್ಯೆ ಖಂಡಿಸಿ ಹಿಂದೂ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದರು. ಶಾಸಕ ಸಂಜೀವ ಮಠಂದೂರು, ಸಚಿವ ಎಸ್.ಅಂಗಾರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಲ್ಲಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಹತ್ಯೆಗೆ ಸಂಬಂಧಿಸಿ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆಯು ವಿಶೇಷ ತಂಡಗಳನ್ನು ರಚಿಸಿತ್ತು. ನಂತರ ನಡೆದ ಬೆಳವಣಿಗೆಗಳಲ್ಲಿ ಕೊಲೆಗೆ ಸಹಕಾರ ನೀಡಿದ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು.
ಕೆಲವೇ ದಿನದಲ್ಲಿ ಪ್ರಕರಣ ಭೇದಿಸಿದ ಪೊಲೀಸರು:ಪ್ರವೀಣ್ ನೆಟ್ಟಾರು ಹತ್ಯೆಪ್ರಕರಣ ದಾಖಲಾದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸೂಕ್ಷ್ಮ ವಾತಾವರಣ ಸೃಷ್ಟಿಯಾಗಿತ್ತು. ಯಾವುದೇ ಸುಳಿವೂ ಇಲ್ಲದೇ ಇದ್ದ ಈ ಪ್ರಕರಣದಲ್ಲಿ ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚುವುದು ಪೊಲೀಸರಿಗೆ ದೊಡ್ಡ ಮಟ್ಟದ ಸವಾಲಾಗಿತ್ತು. ಆರೋಪಿಗಳನ್ನು ಪತ್ತೆ ಹಚ್ಚಲು ದಕ್ಷಿಣ ಕನ್ನಡ ಜಿಲ್ಲೆ ಮತ್ತು ಪಶ್ಚಿಮ ವಲಯದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ತನಿಖಾ ತಂಡವನ್ನು ರಚಿಸಿ, ರಾಜ್ಯದಲ್ಲಿ ಮತ್ತು ಹೊರ ರಾಜ್ಯದ ವಿವಿಧೆಡೆಗಳಲ್ಲಿ ಪತ್ತೆಗೆ ಪ್ರಯತ್ನಿಸಲಾಗಿತ್ತು.
ಇದಕ್ಕೆ ಒಟ್ಟು 82 ಜನ ಅಧಿಕಾರಿ ಮತ್ತು ಸಿಬ್ಬಂದಿ ತನಿಖಾ ತಂಡ ಹಗಲು ರಾತ್ರಿ ಕರ್ತವ್ಯ ನಿರ್ವಹಿಸಿ, ಸ್ಪಷ್ಟ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ಅಂತಿಮವಾಗಿ ಆರೋಪಿಗಳನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿತ್ತು. ಅಲ್ಲದೇ ಈ ಕೋಮು ಸೂಕ್ಷ್ಮ ಪ್ರಕರಣದ ಹಿನ್ನೆಲೆಯಲ್ಲಿ ಪುತ್ತೂರು, ಸುಳ್ಯ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ನೆರೆದಿದ್ದು, ಇದನ್ನೂ ಹತೋಟಿಗೆ ತಂದು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿಯೂ ಪೊಲೀಸರು ಯಶಸ್ವಿಯಾಗಿದ್ದರು.
ಪ್ರವೀಣ್ ಪತ್ನಿಗೆ ಉದ್ಯೋಗ ನೀಡಿದ ಸರ್ಕಾರ:ಕಳೆದ ವರ್ಷದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದರು. ಅದರಂತೆ ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ಸಿ ಗ್ರೂಪ್ ಹುದ್ದೆಗೆ ನೂತನ ಅವರನ್ನು ನೇಮಕಾತಿ ಮಾಡಲಾಗಿದೆ.