ಕರ್ನಾಟಕ

karnataka

ETV Bharat / state

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್ - NIA Special Court

ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಹೈಕೋರ್ಟ್​ ಜಾಮೀನು ನಿರಾಕರಿಸಿತು.

ಹೈಕೋರ್ಟ್
ಹೈಕೋರ್ಟ್

By ETV Bharat Karnataka Team

Published : Oct 4, 2023, 9:21 PM IST

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ. ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಕೆ.ಇಸ್ಮಾಯಿಲ್ ಶಫಿ, (ಆರೋಪಿ 9) ಕೆ.ಮೊಹಮ್ಮದ್ ಇಕ್ಬಾಲ್ (ಆರೋಪಿ 10) ಮತ್ತು ಎಂ.ಶಾಹೀದ್ (ಆರೋಪಿ 11) ಜಾಮೀನು ಕೋರಿ ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಚ್.ಬಿ.ಪ್ರಭಾಕರ್ ಶಾಸ್ತ್ರಿ ಮತ್ತು ಅನಿಲ್ ಕೆ. ಕಟ್ಟಿ ಅವರಿದ್ದ ವಿಭಾಗೀಯ ಪೀಠ ಅರ್ಜಿ ತಿರಸ್ಕರಿಸಿ ಆದೇಶಿಸಿದೆ.

ಮೇಲ್ಮನವಿ ಸಲ್ಲಿಸಿರುವ ಆರೋಪಿಗಳು ಪ್ರಕರಣದಲ್ಲಿ ಸಕ್ರಿಯ ಪಾತ್ರ ವಹಿಸುವುದನ್ನು ತೋರಿಸಲು ಸೂಕ್ತ ಸಾಕ್ಷ್ಯಧಾರಗಳು ಲಭ್ಯವಿದೆ. ಮೃತನ ಮೇಲೆ ದಾಳಿ ನಡೆದ ವೇಳೆ ಸ್ಥಳದಲ್ಲಿ ಈ ಮೂರು ಆರೋಪಿಗಳು ಭೌತಿಕವಾಗಿ ಹಾಜರಿರಲಿಲ್ಲ. ಆದರೆ, ಪ್ರವೀಣ್ ನೆಟ್ಟಾರು ಹತ್ಯೆಗೆ ಯೋಜನೆ ರೂಪಿಸಲು ಹಮ್ಮಿಕೊಂಡಿದ್ದ ಪಿತೂರಿ ಸಭೆಯಲ್ಲಿ ಭಾಗವಹಿಸಿದ್ದರು. ಇವರು ಹತ್ಯೆ ಯೋಜನೆ ಬಗ್ಗೆ ಚರ್ಚಿಸಿದ್ದರು ಎಂಬ ಅಂಶ ತನಿಖೆಯಲ್ಲಿ ತಿಳಿದು ಬಂದಿದೆ. ಅಪರಾಧ ಕೃತ್ಯಕ್ಕೆ ಪಿತೂರಿ ರೂಪಿಸಲು ಯಾವುದೇ ಬಹಿರಂಗ ಕ್ರಿಯೆಯನ್ನು ಮಾಡುವ ಅಗತ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ನಾಲ್ವರು ಸಾಕ್ಷಿಗಳ ಹೇಳಿಕೆಯ ಪ್ರಕಾರ, ಆರೋಪಿಗಳು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ತನಿಖಾಧಿಕಾರಿಗಳು ಸಂಗ್ರಹಿಸಿರುವ ಆರೋಪಿಗಳ ಫೋನ್ ಕರೆಗಳ ವಿವರಗಳು ಸಹ ಪ್ರಕರಣದಲ್ಲಿ ಮೇಲ್ಮನವಿದಾರ ಆರೋಪಿಗಳು ಪಿತೂರಿ ನಡೆಸುವುದನ್ನು ತೋರಿಸುತ್ತದೆ. ಆರೋಪಿಗಳು ಪ್ರಕರಣದಲ್ಲಿ ನಿರ್ದಿಷ್ಟ, ಸಕ್ರಿಯ ಮತ್ತು ಗಮನಾರ್ಹ ಪಾತ್ರ ನಿರ್ವಹಿಸುವುದನ್ನು ಮೇಲ್ನೋಟಕ್ಕೆ ದೃಢಪಡಿಸುವ ಸಾಕ್ಷ್ಯಗಳು ನ್ಯಾಯಾಲಯದ ಮುಂದಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಉಲ್ಲೇಖಿಸಿತು.

ಅಲ್ಲದೆ, ಮೇಲ್ಮನವಿದಾರರು ನೆಟ್ಟಾರು ಹತ್ಯೆಯ ಪಿತೂರಿಯಲ್ಲಿ ಭಾಗವಹಿಸಿರುವುದು ಸತ್ಯವಾಗಿದ್ದು, ಅದು ಭಯೋತ್ಪಾದಕ ಕೃತ್ಯವನ್ನು ಸಮರ್ಥಿಸುವ, ಪ್ರೋತ್ಸಾಹಿಸುವ ಮತ್ತು ಸುಗಮಗೊಳಿಸುವುದಾಗಿದೆ. ಕಾನೂನುಬಾಹಿರ ಚುಟುವಟಿಕೆಗಳ ತಡೆ ಕಾಯ್ದೆಯಡಿ (ಯುಎಪಿ) ಭಯೋತ್ಪಾದಕ ಕೃತ್ಯದ ಪೂರ್ವಸಿದ್ಧತೆ ಕ್ರಿಯೆಯಾಗಿದ್ದು, ಶಿಕ್ಷಾರ್ಹ ಅಪರಾಧ ಎಂದು ತಿಳಿಸಿದ ನ್ಯಾಯಪೀಠ, ಮೇಲ್ಮನವಿಯನ್ನು ವಜಾಗೊಳಿಸಿ ಆರೋಪಿಗಳಿಗೆ ಜಾಮೀನು ನಿರಾಕರಿಸಿದೆ.

ಪ್ರಕರಣದ ಹಿನ್ನೆಲೆ:ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿ ಸಮಿತಿಯ ಸದಸ್ಯನಾಗಿದ್ದ ಪ್ರವೀಣ್ ನೆಟ್ಟಾರು, ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮ ಅಕ್ಷಯ ಫ್ರೆಶ್ ಚಿಕನ್ ಫಾರ್ಮ್ ಶಾಪ್ ಹೊಂದಿದ್ದರು. 2022 ರ ಜು. 26ರಂದು ರಾತ್ರಿ 8:30 ರ ವೇಳೆ ಅಂಗಡಿ ಮುಚ್ಚಿ ಮನೆಗೆ ಮೋಟಾರು ವಾಹನದಲ್ಲಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ತೀವ್ರವಾಗಿ ಗಾಯಗೊಂಡಿದ್ದ ನೆಟ್ಟಾರು ಅವರನ್ನು ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್‌ನಲ್ಲಿ ಕರೆದೊಯ್ಯಲಾಗುತ್ತಿತ್ತು. ಆದರೆ, ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದರು.

ಘಟನೆ ಕುರಿತು ಪ್ರವೀಣ್ ಸ್ನೇಹಿತ ಮಧು ಕುಮಾರ್ ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಯುತ್ತಿದ್ದಾಗ ಪ್ರಕರಣವನ್ನು ಎನ್‌ಐಎಗೆ ವಹಿಸಿ 2022 ರ ಆ. 3ರಂದು ಕೇಂದ್ರ ಸರ್ಕಾರ ಆದೇಶಿಸಿತ್ತು. 2022 ರ ಆ. 4ರಂದು ಎನ್‌ಐಎ ತನಿಖಾಧಿಕಾರಿಗಳು ಪ್ರಕರಣವನ್ನು ಮತ್ತೆ ದಾಖಲಿಸಿಕೊಂಡಿದ್ದರು. ಬಳಿಕ ತನಿಖೆ ಮುಂದುವರಿಸಿ, ಮೇಲ್ಮನವಿದಾರ ಆರೋಪಿಗಳನ್ನು ಬಂಧಿಸಿದ್ದರು.

ಈ ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿ 49ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ (ಎನ್‌ಐಎ ವಿಶೇಷ ನ್ಯಾಯಾಲಯ) 2023 ರ ಏ. 29ರಂದು ಆದೇಶಿಸಿತು. ಇದರಿಂದಾಗಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆರೋಪಿಗಳ ವಿರುದ್ಧದ ಪ್ರಕರಣವು ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.

ಇದನ್ನೂ ಓದಿ:ಕಮಲದ ಕೊಳವಿದ್ದಲ್ಲಿ ವಾಣಿಜ್ಯ ಸಂಕೀರ್ಣ ಆರೋಪ: ಅರ್ಜಿ ವಜಾಗೊಳಿಸಿದ ಹೈಕೋರ್ಟ್

ABOUT THE AUTHOR

...view details