ಬೆಂಗಳೂರು: ಜುಲೈ 2 ರಂದು ನಿಗದಿ ಆಗಿರುವ ಪ್ರತಿಜ್ಞಾ ದಿನದ ಪೂರ್ವಭಾವಿ ತಯಾರಿ ಕುರಿತು ಸಮಾಲೋಚನೆ ನಡೆಸಲು ಕರೆದಿರುವ ಸಭೆ ನಡೆಯುತ್ತಿದೆ.
ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ಹಾಗೂ ಸತೀಶ್ ಜಾರಕಿಹೊಳಿ ಈಶ್ವರ್ ಖಂಡ್ರೆ ಹಾಗೂ ಸಲೀಮ್ ಅಹಮ್ಮದ್ ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಕಾರ್ಯಕ್ರಮ ನಡೆಯಲಿದ್ದು, ಈ ಕುರಿತಂತೆ ಚರ್ಚೆ ನಡೆಯುತ್ತಿದೆ.
ಕೆಪಿಸಿಸಿ ಅಧ್ಯಕ್ಷರು, ಕಾರ್ಯಾಧ್ಯಕ್ಷರ ಪದಗ್ರಹಣ ಸಮಾರಂಭವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುವ ಹಾಗೂ ಆನ್ಲೈನ್ ಮೂಲಕ ಕಾರ್ಯಕ್ರಮವನ್ನು ಯಾವುದೇ ಸಮಸ್ಯೆಯಿಲ್ಲದೆ ಪೂರ್ಣಗೊಳಿಸುವ ವಿಚಾರವಾಗಿ ಕೈಗೊಂಡಿರುವ ಕಾರ್ಯ ಯೋಜನೆಗಳ ಕುರಿತು ಚರ್ಚೆ ನಡೆಯುತ್ತಿದೆ. ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯತಿ ಮಟ್ಟಗಳಲ್ಲಿನ ಸುಮಾರು 8,000 ಸ್ಥಳಗಳಲ್ಲಿ ಕಾರ್ಯಕ್ರಮದ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಸಭೆಯಲ್ಲಿ 2019ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು, 2018ರ ವಿಧಾನಸಭೆ ಚುನಾವಣೆಯ ಪರಾಜಿತ ಅಭ್ಯರ್ಥಿಗಳು, ಕೆಪಿಸಿಸಿ ಮಾಜಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ಉಸ್ತುವಾರಿಗಳಾಗಿ ನಿಯೋಜಿತರಾಗಿರುವ ಸಮನ್ವಯಕಾರರು ಹಾಗೂ ಇತರೆ ಪಕ್ಷದ ಮುಖಂಡರು ಪಾಲ್ಗೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಪ್ರಿಯಾಂಕ ಖರ್ಗೆ, ಕೆ.ಎನ್.ರಾಜಣ್ಣ, ಎಸ್.ಆರ್.ಪಾಟೀಲ್ ಸೇರಿದಂತೆ ಹಿರಿಯ ನಾಯಕರು ಭಾಗಿಯಾಗಿದ್ದಾರೆ.