ಕರ್ನಾಟಕ

karnataka

ETV Bharat / state

ಜೆಡಿಎಸ್​ ಅಭ್ಯರ್ಥಿಗಳ ಎರಡನೇ ಪಟ್ಟಿ ಸಿದ್ಧತೆ: ಬಿಡುಗಡೆ ಯಾವಾಗ? - ಈಟಿವಿ ಭಾರತ ಕನ್ನಡ

ಈಗಾಗಲೇ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಸಿದ್ಧವಾಗುತ್ತಿದೆ. ಹಾಸನ ಜಿಲ್ಲೆಯಲ್ಲಿ ಯಾರು ಅಭ್ಯರ್ಥಿ ಎಂಬುದು ಸ್ವಲ್ಪ ಗೊಂದಲದಲ್ಲಿದೆ. ​

JDS
ಜೆಡಿಎಸ್

By

Published : Jan 27, 2023, 2:12 PM IST

ಬೆಂಗಳೂರು:ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷವು ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಸಿದ್ಧತೆ ಮಾಡಿಕೊಳ್ಳುತ್ತಿದೆ. ಮೊದಲ ಹಂತದಲ್ಲಿ 93 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದ ಜೆಡಿಎಸ್ ಈಗ ಎರಡನೇ ಹಂತದಲ್ಲಿ ಸುಮಾರು 55 ರಿಂದ 65 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.

ಮಹಾಶಿವರಾತ್ರಿ ಹಬ್ಬದ ವೇಳೆಗೆ 2ನೇ ಪಟ್ಟಿ ಪ್ರಕಟಿಸುವ ನಿರೀಕ್ಷೆ ಇದೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಸರಣಿ ಸಭೆಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆದಿದ್ದು, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಇತರ ಪ್ರಮುಖ ನಾಯಕರ ಜೊತೆ ಒಂದು ಸುತ್ತಿನ ಸಭೆ ಕೂಡ ಮುಗಿದಿದೆ.

ಹಾಸನ, ಅರಕಲಗೂಡು ಹಾಗೂ ಅರಸೀಕೆರೆ ವಿಧಾನಸಭಾ ಕ್ಷೇತ್ರಗಳಲ್ಲಿ ಗೊಂದಲವಿದ್ದ ಹಿನ್ನೆಲೆಯಲ್ಲಿ ಮೊದಲ ಪಟ್ಟಿಯಲ್ಲಿ ಹಾಸನ ಜಿಲ್ಲೆಯ ಅಭ್ಯರ್ಥಿಗಳ ಹೆಸರು ಪ್ರಕಟಿಸಿರಲಿಲ್ಲ. ಹಾಸನ ಕ್ಷೇತ್ರದಲ್ಲಿ ಸ್ವರೂಪ್, ಭವಾನಿ ರೇವಣ್ಣ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಅರಸೀಕೆರೆ ಕ್ಷೇತ್ರದ ಶಾಸಕ ಶಿವಲಿಂಗೇಗೌಡ ಜೆಡಿಎಸ್‌ ತೊರೆಯುವ ಹಾದಿಯಲ್ಲಿದ್ದು, ಅರಸೀಕೆರೆ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಳಂಬ ಮಾಡಲಾಗಿದೆ. ಅರಕಲಗೂಡು ಕ್ಷೇತ್ರದಲ್ಲಿ ಎ.ಟಿ.ರಾಮಸ್ವಾಮಿ ಕೂಡ ಜೆಡಿಎಸ್‌ಗೆ ಗುಡ್ ಬೈ ಹೇಳುವ ಮಾತುಗಳು ಕೇಳಿಬರುತ್ತಿವೆ. ಹಾಗಾಗಿ ಅಲ್ಲಿನ ಅಭ್ಯರ್ಥಿ ಆಯ್ಕೆಗೆ ಜೆಡಿಎಸ್ ಕಸರತ್ತು ಮಾಡುತ್ತಿದೆ.
ತೀವ್ರ ಕುತೂಹಲ ಕೆರಳಿಸಿರುವ ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆಯೇ? ಎಂಬ ಪ್ರಶ್ನೆಯೂ ಮೂಡಿದೆ.

ಇದನ್ನೂ ಓದಿ:ಅವರು ಆಕಾಶದಲ್ಲಿ ಇರುವವರು, ನಾನು ಭೂಮಿಯಲ್ಲಿ ಇರುವವನು : ಹೆಚ್​ಡಿಕೆ ವ್ಯಂಗ್ಯ

ಪ್ರಸ್ತುತ 93 ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಈಗಾಗಲೇ ಚುನಾವಣಾ ಸಿದ್ಧತೆಯಲ್ಲಿ ತೊಡಗಿದ್ದಾರೆ. ಮೊದಲ ಪಟ್ಟಿಯಲ್ಲಿ ಸಿಂದಗಿ ಕ್ಷೇತ್ರದ ಘೋಷಿತ ಅಭ್ಯರ್ಥಿ ಶಿವಾನಂದ ಪಾಟೀಲ್ ಅಕಾಲಿಕ ನಿಧನರಾಗಿದ್ದು, ಈ ಕ್ಷೇತ್ರಕ್ಕೆ ಪರ್ಯಾಯ ಅಭ್ಯರ್ಥಿ ಆಯ್ಕೆ ಮಾಡಬೇಕಿದೆ. ಇದರ ಜೊತೆಗೆ ಎರಡನೇ ಹಂತದಲ್ಲಿ ಅಂದಾಜು 65 ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ. ಮಕರ ಸಂಕ್ರಾಂತಿ ಹಬ್ಬದ ವೇಳೆಗೆ ಎರಡನೇ ಪಟ್ಟಿ ಬಿಡುಗಡೆ ಮಾಡಲು ಉದ್ದೇಶಿಸಲಾಗಿತ್ತು. ಆದರೆ, ನಿರಂತರವಾಗಿ ಪಂಚರತ್ನ ರಥಯಾತ್ರೆಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ತೊಡಗಿರುವ ಹಿನ್ನೆಲೆಯಲ್ಲಿ ಈ ಪಟ್ಟಿ ಬಿಡುಗಡೆ ವಿಳಂಬವಾಗಿದೆ.

ಮುಂಬರುವ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಜೆಡಿಎಸ್, 123 ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂಬ ಗುರಿ ಹಾಕಿಕೊಂಡಿದೆ. ಪಕ್ಷದಲ್ಲಿ ಹಲವು ಗೊಂದಲಗಳಿದ್ದು, ಕೆಲವು ನಾಯಕರ ಮುನಿಸು, ಹಾಸನ ಕ್ಷೇತ್ರದಲ್ಲಿ ಅಭ್ಯರ್ಥಿಯ ಗೊಂದಲ ಹೀಗೆ ಹಲವು ಸವಾಲುಗಳನ್ನು ಕುಮಾರಸ್ವಾಮಿಯವರು ಎದುರಿಸಬೇಕಿದೆ. ಹಾಗಾಗಿಯೇ, ಹಾಸನ ಜಿಲ್ಲೆಯ ಅಭ್ಯರ್ಥಿಗಳ ಆಯ್ಕೆಯನ್ನು ವರಿಷ್ಠರಿಗೆ ಬಿಡಲಾಗಿದೆ.

ಇನ್ನು ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪಂಚರತ್ನ ರಥಯಾತ್ರೆ ಮೂಲಕ ಚುನಾವಣಾ ಪ್ರಚಾರ ನಡೆಸುತ್ತಿರುವ ಜೆಡಿಎಸ್, ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬಂದರೆ ಐದು ವರ್ಷದಲ್ಲಿ ಪಂಚರತ್ನ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಲಾಗುತ್ತಿದೆ. ಕೋಲಾರದ ಮುಳಬಾಗಿಲು ತಾಲೂಕಿನಿಂದ ಆರಂಭವಾದ ಪಂಚರತ್ನ ರಥಯಾತ್ರೆ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಮೊದಲ ಹಂತದ ರಥಯಾತ್ರೆ ಮುಗಿಸಿ, ಇದೀಗ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಸಾಗುತ್ತಿದೆ. ಇದರ ಮಧ್ಯೆ ಬಿಡುವು ಪಡೆದುಕೊಂಡು ಕುಮಾರಸ್ವಾಮಿ ಅವರು ರೈತರ ಹಾಗೂ ಯುವಕರ ಜೊತೆ ಸಂವಾದ ನಡೆಸಿ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಶತಾಯ-ಗತಾಯ 2023 ಕ್ಕೆ ಜೆಡಿಎಸ್​ನ ಸ್ವತಂತ್ರ ಸರ್ಕಾರ ತರಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ಕುಮಾರಸ್ವಾಮಿ ಅವರು ಯಶಸ್ವಿಯಾಗುವರೇ? ಎಂಬುದು ಕಾದುನೋಡಬೇಕಿದೆ.

ಇದನ್ನೂ ಓದಿ:ಶಾಲೆಗಳ ಸಮಗ್ರ ಅಭಿವೃದ್ಧಿಗೆ ಅನುದಾನ: ಸಿಎಂ ಬೊಮ್ಮಾಯಿ ಭರವಸೆ

ABOUT THE AUTHOR

...view details