ಬೆಂಗಳೂರು: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳ ಇಚ್ಛೆಯಂತೆ ಅವರ ಬೃಂದಾವನವನ್ನು ನಗರದ ಪೂರ್ಣಪ್ರಜ್ಞ ವಿದ್ಯಾಪೀಠ ಸಂಸ್ಕೃತ ಗುರುಕುಲದಲ್ಲಿ ನೆರವೇರಿಸಲು ಸಕಲ ಸಿದ್ಧತೆ ನಡೆದಿದೆ. ಈಗಾಗಲೇ ಶ್ರೀಗಳ 150 ಶಿಷ್ಯರು ಉಡುಪಿಯಿಂದ ಬೆಂಗಳೂರಿನ ಮಠದ ಕಡೆ ಬಂದಿದ್ದು, ಅಂತಿಮ ವಿಧಿ ವಿಧಾನಕ್ಕೆ ಬೇಕಾದ ವ್ಯವಸ್ಥೆಗೆ ತಯಾರಿ ನಡೆಯುತ್ತಿದೆ.
ಪೇಜಾವರ ಶ್ರೀಗಳ ಇಚ್ಛೆಯಂತೆ ಬೆಂಗಳೂರಿನ ವಿದ್ಯಾಪೀಠದಲ್ಲಿ ಅಂತ್ಯಕ್ರಿಯೆ... ಸಕಲ ಸಿದ್ಧತೆ - ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳು ಬೃಂದಾವನಸ್ಥ
ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳು ಬೃಂದಾವನಸ್ಥರಾದ ಹಿನ್ನೆಲೆ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ಸಂಸ್ಕೃತ ಗುರುಕುಲದಲ್ಲಿ ಸಕಲ ಸಿದ್ಧತೆ ನಡೆದಿದೆ.
ಬೆಂಗಳೂರಿನ ವಿದ್ಯಾಪೀಠಕ್ಕೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ ಆಗಮಿಸಿದ್ದು, ಅಂತಿಮ ವ್ಯವಸ್ಥೆಯ ಕಾರ್ಯವನ್ನು ಪರಿಶೀಲಿಸುತ್ತಿದ್ದಾರೆ. ಈಗಾಗಲೇ ಮಠದ ಸುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಮಠದ ಒಳಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಇನ್ನು ಶ್ರೀಗಳ ಪಾರ್ಥಿವ ಶರೀರದ ದರ್ಶನಕ್ಕಾಗಿ ಬಸವನಗುಡಿ ನ್ಯಾಷನಲ್ ಕಾಲೇಜು ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.
ನ್ಯಾಷನಲ್ ಕಾಲೇಜ್ ಮೈದಾನಕ್ಕೆ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ, ಸಂಸದ ಪಿ.ಸಿ.ಮೋಹನ್, ಮೇಯರ್ ಗೌತಮ್ ಆಗಮಿಸಿ ಸಿದ್ಧತೆ ಪರಿಶೀಲಿಸಿದರು. ಇನ್ನು ಸ್ಥಳದಲ್ಲಿ ಪೊಲೀಸರು ಭದ್ರತೆ ಒದಗಿಸಿದ್ದಾರೆ.