ಬೆಂಗಳೂರು :ರಾಜ್ಯದಲ್ಲಿ ಸ್ಮಶಾನ ಭೂಮಿ ಇಲ್ಲದ ಗ್ರಾಮಗಳ ಬಗ್ಗೆ ಜನರಿಗೆ ತಿಳಿಸುವುದಕ್ಕೆ ಪತ್ರಿಕಾ ಪ್ರಕಟಣೆ ಹೊರಡಿಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಸ್ಮಶಾನ ಭೂಮಿ ಒದಗಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದ್ದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಮೊಹಮ್ಮದ್ ಇಕ್ಬಾಲ್ ಎಂಬುವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವೀರಪ್ಪ ಮತ್ತು ನ್ಯಾಯಮೂರ್ತಿ ವೆಂಕಟೇಶ್ ನಾಯಕ್ ಟಿ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿತು.
ವಿಚಾರಣೆ ವೇಳೆ ಸ್ಮಶಾನ ಭೂಮಿ ಲಭ್ಯವಿಲ್ಲದ ಗ್ರಾಮಗಳ ಕುರಿತು ರಾಜ್ಯ ಕಾನೂನು ಸೇವಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆ ಹೊರಡಿಸಿ, ಯಾವ ಗ್ರಾಮದಲ್ಲಿ ಸ್ಮಸಾನ ಭೂಮಿ ಇಲ್ಲ ಎಂಬುದರ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದು ಪೀಠ ಹೇಳಿತು. ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲರು, ಸರ್ಕಾರದಿಂದಲೇ ಪತ್ರಿಕಾ ಪ್ರಕಟಣೆ ಹೊರಡಿಸಿ, ರಾಜ್ಯದಲ್ಲಿ ಯಾವ ಗ್ರಾಮದಲ್ಲಿ ಸ್ಮಶಾನ ಭೂಮಿ ಇಲ್ಲ ಎಂಬುದರ ಬಗ್ಗೆ ಸಾರ್ವಜನಿಕರಿಂದ ಮನವಿ ಪಡೆದುಕೊಂಡು, ಸ್ಮಶಾನ ಭೂಮಿ ಒದಗಿಸುವ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.
ಈ ಅಂಶವನ್ನು ದಾಖಲಿಸಿಕೊಂಡ ನ್ಯಾಯಪೀಠ, ರಾಜ್ಯದ ಯಾವ ಗ್ರಾಮದಲ್ಲಿ ಸ್ಮಶಾನ ಭೂಮಿ ಇಲ್ಲ ಎಂಬುದರ ಬಗ್ಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವಾ ಸಮಿತಿಗಳಿಂದ ಮಾಹಿತಿ ಪಡೆದುಕೊಳ್ಳಲು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿತು. ಬಳಿಕ ಜಿಲ್ಲಾಧಿಕಾರಿಗಳು ಇಡೀ ಜಿಲ್ಲೆಯ ಪಾಲಕರಾಗಿರುತ್ತಾರೆ. ಅವರು ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದರೆ ಹೇಗೆ ಎಂದು ನ್ಯಾಯಪೀಠ ಪ್ರಶ್ನಿಸಿತು. ಅಲ್ಲದೆ, ಸ್ಮಸಾನ ಭೂಮಿ ಒದಗಿಸಿರುವ ಸಂಬಂಧ ಕೇವಲ ದಾಖಲೆಗಳಲ್ಲಿ ಅನುಷ್ಟಾನವಾಗಬಾರದು ಪ್ರಾಯೋಗಿಕವಾಗಿ ಅನುಷ್ಟಾನವಾಗಬೇಕು ಎಂದು ತಿಳಿಸಿ ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿತು.