ಬೆಂಗಳೂರು: ರಾಜ್ಯದಲ್ಲಿ ಈಗ ಮತ್ತೆ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು, ತೆರಿಗೆ ಸೋರಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ನಕಲಿ ಇ-ವೇ ಬಿಲ್ಗಳ ಬಳಕೆ, ಸರಕು ಸಾಗಾಣಿಕೆಗೆ ನೀಡುವ ಸಮಯಾವಕಾಶದ ದುರ್ಬಳಕೆ ಮುಂತಾದ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೋವಿಡ್-19ರ ಹಿನ್ನೆಲೆಯಲ್ಲಿ ಲಾಕ್ಡೌನ್ ಘೋಷಣೆಯಿಂದಾಗಿ ಸಹಜವಾಗಿ ತೆರಿಗೆ ಸಂಗ್ರಹ ಕುಂಠಿತವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಸರಿದೂಗಿಸಲು ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು. ಆರ್ಥಿಕ ಚಟುವಟಿಕೆಗಳು ಇದೀಗ ಮತ್ತೆ ಪ್ರಾರಂಭವಾಗುತ್ತಿದ್ದು, ವ್ಯಾಪಾರಿಗಳಿಗೆ ಕಿರುಕುಳ ನೀಡದಂತೆ ಸಲಹೆ ನೀಡಿದರು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್ಎನ್.ಪ್ರಸಾದ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ.ಎಸ್.ಶ್ರೀಕರ್ ಮೊದಲಾದವರು ಉಪಸ್ಥಿತರಿದ್ದರು.