ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದು (ಬುಧವಾರ) ಕರಾವಳಿ, ಕಿತ್ತೂರು ಕರ್ನಾಟಕದಲ್ಲಿ ನಡೆಯುವ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಬೇಟೆ ನಡೆಸುವರು.
ಎಲ್ಲೆಲ್ಲಿ?: ಬೆಳಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಇದಾದ ನಂತರ ಉತ್ತರ ಕನ್ನಡ ಜಿಲ್ಲೆಗೆ ತೆರಳಿ ಅಂಕೋಲಾದಲ್ಲಿ ಮಧ್ಯಾಹ್ನ 1.15 ಗಂಟೆಗೆ ಜರುಗಲಿರುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವರು. ಸಂಜೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ 3.45ಕ್ಕೆ ನಡೆಯಲಿರುವ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಮೇ 6ರಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಗೋವಿಂದರಾಜನಗರ, ವಿಜಯನಗರ, ಚಿಕ್ಕಪೇಟೆ, ಬಸನಗುಡಿ, ಪದ್ಮನಾಭನಗರ, ಬಿಟಿಎಂ ಲೇಔಟ್, ಜಯನಗರ, ಬೊಮ್ಮನಹಳ್ಳಿ ಕ್ಷೇತ್ರಗಳ ಕಾರ್ಯಕರ್ತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ಮೇ 7ರಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸುವರು.
ಹಳೇ ಮೈಸೂರು ಭಾಗದಲ್ಲಿ ಪ್ರಚಾರ:ಜೆಡಿಎಸ್ ಪ್ರಾಬಲ್ಯವಿರುವ ಈ ಭಾಗದ ಹಲವು ಜಿಲ್ಲೆಗಳಲ್ಲಿ ಮೊದಲ ಹಂತದ ಪ್ರಚಾರದಲ್ಲಿ ಮೋದಿ ಈಗಾಗಲೇ ಭರ್ಜರಿ ಕ್ಯಾಂಪೇನ್ ಮಾಡಿದ್ದಾರೆ. ಏಪ್ರಿಲ್ 29 ಮತ್ತು 30 ರಂದು ಮೈಸೂರು, ಚನ್ನಪಟ್ಟಣ, ಹಾಸನ, ಕೋಲಾರ, ಬೆಂಗಳೂರಿನಲ್ಲಿ ರೋಡ್ ಶೋ ನಡೆಸಿ ಜನರನ್ನು ಆಕರ್ಷಿಸಿದ್ದರು.