ಕರ್ನಾಟಕ

karnataka

ETV Bharat / state

ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಸಿಎಂ ಸೂಚನೆ

ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಮಳೆಹಾನಿ ಕುರಿತಂತೆ ಅಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಸಭೆ ನಡೆಸಿದರು. ರಾಜ್ಯದ ವಸ್ತುಸ್ಥಿತಿ ಮಾಹಿತಿ ಪಡೆದು ರಾಜ್ಯದ ಬರ ಪರಿಸ್ಥಿತಿಯ ಗಂಭೀರತೆಯನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲಾಗುವುದು. ಮಲೆನಾಡು ಹಾಗೂ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಹೆಚ್ಚು ಮಳೆ ಕೊರತೆ ತಲೆದೋರಿದೆ. ಹಾಗಾಗಿ ಈ ಕರಿತು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

By

Published : Jul 30, 2019, 8:59 PM IST

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ತಲೆದೋರಿರುವ ಹಿನ್ನೆಲೆಯಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಮಳೆಹಾನಿ ಕುರಿತಂತೆ ಅಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಸಭೆ ನಡೆಸಿದರು. ರಾಜ್ಯದಲ್ಲಿ ಸರಾಸರಿ ಶೇ.18 ರಷ್ಟು ಮಳೆ ಕೊರತೆ ಇದೆ. ಮಲೆನಾಡು ಹಾಗೂ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಹೆಚ್ಚು ಮಳೆ ಕೊರತೆ ತಲೆದೋರಿದೆ. ಜಲಾಶಯಗಳಲ್ಲಿ ನೀರಿನ ಸಂಗ್ರಹ ಶೇ. 47 ರಷ್ಟಿದೆ. 158 ತಾಲೂಕುಗಳಲ್ಲಿ ಅಂತರ್ಜಲಮಟ್ಟ ಕುಸಿದಿದೆ. ಮುಂಗಾರು ಹಂಗಾಮಿನ ಬಿತ್ತನೆ ಪ್ರಮಾಣ ಕೇವಲ ಶೇ. 53ರಷ್ಟು ಮಾತ್ರ ಆಗಿದೆ ಎನ್ನುವ ಮಾಹಿತಿಗೆ ಸಿಎಂ ತೀವ್ರ ಆತಂಕ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಪ್ರಸ್ತುತ 3,067 ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ಅಥವಾ ಖಾಸಗಿ ಬೋರ್​​ವೆಲ್‍ಗಳಿಂದ ನೀರು ಪೂರೈಸಲಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ತಾಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಸುಮಾರು12 ವಾರಗಳಿಗಾಗುವಷ್ಟು ಮೇವು ಲಭ್ಯವಿದ್ದು, 27 ಗೋಶಾಲೆಗಳನ್ನು ಸ್ಥಾಪಿಸಲಾಗಿದೆ. 11 ಮೇವು ಬ್ಯಾಂಕ್‍ಗಳನ್ನು ಸ್ಥಾಪಿಸಲಾಗಿದೆ. ಜಿಲ್ಲಾಧಿಕಾರಿಗಳ ಬಳಿ 547.6 ಕೋಟಿ ರೂ. ಅನುದಾನ ಲಭ್ಯವಿದ್ದು, ಹಣಕಾಸಿನ ಯಾವುದೇ ಕೊರತೆ ಇಲ್ಲ ಎಂದು ಅಧಿಕಾರಿಗಳು ವಿವರಿಸಿದರು. ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯದಲ್ಲಿ ಈವರೆಗೆ ಗುರಿ ಮೀರಿದ ಸಾಧನೆಯಾಗಿದೆ ಎಂದು ಸಭೆಗೆ ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ರಾಜ್ಯದ ರೈತರು ಹಾಗೂ ಜನಸಾಮಾನ್ಯರ ನೆರವಿಗೆ ಅಧಿಕಾರಿಗಳು ಧಾವಿಸಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ, ಜನರಿಗೆ ಧೈರ್ಯ ತುಂಬಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು. ಅಂತರ್ಜಲ ಮರುಪೂರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಹಾಗೂ ರೈತರು ಬೆಳೆವಿಮೆಯನ್ನು ಕಡ್ಡಾಯವಾಗಿ ಮಾಡಿಸುವಂತೆ ಮನವೊಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಆಗಸ್ಟ್ 2 ರಂದು ಜಿಲ್ಲಾಧಿಕಾರಿಗಳ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ರಾಜ್ಯದ ವಸ್ತುಸ್ಥಿತಿ ಮಾಹಿತಿ ಪಡೆದು ರಾಜ್ಯದ ಬರ ಪರಿಸ್ಥಿತಿಯ ಗಂಭೀರತೆಯನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಲಾಗುವುದು. ಈಗಾಗಲೇ ಬಾಕಿ ಇರುವ ಕಳೆದ ಹಿಂಗಾರು ಹಂಗಾಮಿನ ಎನ್​​​ಡಿಆರ್​​ಎಫ್ ಪರಿಹಾರ, ಉದ್ಯೋಗ ಖಾತ್ರಿ ಯೋಜನೆಯ ಬಾಕಿ ಅನುದಾನ ಹಾಗೂ ಇತರ ಅಗತ್ಯ ಅನುದಾನಗಳ ಬಿಡುಗಡೆಗೆ ಪ್ರಧಾನಿ ಹಾಗೂ ಕೇಂದ್ರದ ಸಚಿವರಿಗೆ ಮನವಿ ಮಾಡುತ್ತೇವೆ. ಅದಕ್ಕಾಗಿಯೇ ಆಗಸ್ಟ್ 5-6 ರಂದು ದೆಹಲಿಗೆ ತೆರಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details