ಬೆಂಗಳೂರು:ಕಲ್ಯಾಣ ಕರ್ನಾಟಕ ಭಾಗದಲ್ಲಿ 1995ರ ನಂತರ ಪ್ರಾರಂಭವಾದ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ವೇತನಾನುದಾನ ಒದಗಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮಾತನಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಸಚಿವರಾದ ಈಶ್ವರ ಖಂಡ್ರೆ, ಭೋಸರಾಜ್, ರಹೀಂ ಖಾನ್, ಶರಣ ಬಸಪ್ಪ ದರ್ಶನಾಪುರ ಅವರೊಂದಿಗೆ ಕಲ್ಯಾಣ ಕರ್ನಾಟಕ ವಿಭಾಗೀಯ ಖಾಸಗಿ ಶಿಕ್ಷಣ ಮಂಡಳಿಗಳ ಒಕ್ಕೂಟ ಮತ್ತು ಆರ್ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘದ ಪದಾಧಿಕಾರಿಗಳ ನಿಯೋಗ ಸಂವಾದ ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ಈಶ್ವರ ಖಂಡ್ರೆ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ಎಲ್ಲರಿಗೂ ದೊರಕಿಸುವಲ್ಲಿ ವೇತನಾನುದಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿ :Karnataka Budget: ರಾಷ್ಟ್ರೀಯ ಶಿಕ್ಷಣ ನೀತಿಗೆ ಕೊಕ್; 10ನೇ ತರಗತಿವರೆಗೂ ಮಕ್ಕಳಿಗೆ ಮೊಟ್ಟೆ/ ಬಾಳೆಹಣ್ಣು ವಿತರಣೆ
ಹಿಂದಿನ ಸರ್ಕಾರದ ಅವಧಿಯಲ್ಲಿ ಶಿಕ್ಷಣದ ಹಕ್ಕು ಕಾಯ್ದೆಯ ನಿಯಮ 4ಕ್ಕೆ ತಿದ್ದುಪಡಿ ತಂದಿರುವ ಪರಿಣಾಮ ಇಂದು 9 ಲಕ್ಷಕ್ಕೂ ಅಧಿಕ ಮಕ್ಕಳು ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಪಡೆಯುವುದರಿಂದ ವಂಚಿತರಾಗಿದ್ದಾರೆ ಎಂದು ನನಗೆ ತಿಳಿಸಲಾಗಿದೆ. ಈ ಬಗ್ಗೆ ಅಂಕಿ-ಅಂಶ ತರಿಸಿಕೊಂಡು ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿ ನ್ಯಾಯ ಒದಗಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.