ಬೆಂಗಳೂರು:ರಾಜ್ಯದ ಕೆಲವೆಡೆ ಬರ ಪರಿಸ್ಥಿತಿ ಹಿನ್ನೆಲೆ ಕುಡಿಯುವ ನೀರಿನ ಲಭ್ಯತೆ ಬಗ್ಗೆ ಪರಿಶೀಲಿಸಿ, ಅಗತ್ಯವಿರುವಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಪ್ರತಿ 15 ದಿನಕ್ಕೊಮ್ಮೆ ಕುಡಿಯುವ ನೀರು ಪರೀಕ್ಷೆ ಮಾಡುವಂತೆ 9 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚಿಸಲಾಯಿತು.
ವಿಕಾಸಸೌಧದಲ್ಲಿ ಪೌರಾಡಳಿತ ಸಚಿವ ರಹೀಂ ಖಾನ್, ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜಂಟಿ ಅಧ್ಯಕ್ಷತೆಯಲ್ಲಿ ಬೆಂಗಳೂರು ವಿಭಾಗದ 9 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಲಾಯಿತು. ಇಂದಿನ ಸಭೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು, ಚಿತ್ರದುರ್ಗ, ಶಿವಮೊಗ್ಗ ಹಾಗೂ ರಾಮನಗರದ ಎಲ್ಲಾ ಜಿಲ್ಲಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಸರ್ಕಾರದ ಕಾರ್ಯದರ್ಶಿಗಳು, ಪೌರಾಡಳಿತ ನಿರ್ದೇಶಕರು ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಇಂದಿರಾ ಕ್ಯಾಂಟೀನ್ ತೆರೆಯಲು ಸೂಚನೆ:ಸರ್ಕಾರದ ಪ್ರಮುಖ ಯೋಜನೆಯಾದ ಇಂದಿರಾ ಕ್ಯಾಂಟೀನ್ನ್ನು ಕರ್ನಾಟಕದಾದ್ಯಂತ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಹಿಂದಿನ ಸಚಿವ ಸಂಪುಟದ ತೀರ್ಮಾನದಂತೆ 188 ಕಡೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಬೇಕು. ಬಡ ಜನರಿಗೆ ಆಹಾರವನ್ನು ಒದಗಿಸುವಂತಹ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡಬೇಕು. ಈ ಬಗ್ಗೆ ಸಚಿವರು ಎಲ್ಲಾ ಜಿಲ್ಲಾಧಿಕಾರಿಗಳು, ಆಯುಕ್ತರು ಹಾಗೂ ಯೋಜನಾ ನಿರ್ದೇಶಕರಿಗೆ ಕಟ್ಟುನಿಟ್ಟಿನ ಆದೇಶವನ್ನು ಒಂದು ತಿಂಗಳೊಳಗೆ ಜಾರಿಗೊಳಿಸಬೇಕೆಂದು ನಿರ್ದೇಶನ ನೀಡಲಾಯಿತು.
ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ನಡೆದ ಕಲುಷಿತ ನೀರು ಪ್ರಕರಣವು ರಾಜ್ಯದ ಯಾವೊಂದು ಸ್ಥಳೀಯ ಸಂಸ್ಥೆಗಳಲ್ಲಿಯೂ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕೆಂದು ಸಭೆಯಲ್ಲಿ ಭಾಗವಹಿಸಿದ ಎಲ್ಲಾ 9 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರುಗಳಿಗೆ ಸೂಚನೆ ನೀಡಿದರು. ನೀರಿನ ಮೂಲಗಳನ್ನು ನಿರ್ವಹಣೆ ಮಾಡುವುದರ ಬಗ್ಗೆ ಸೂಚಿಸಲಾಯಿತು.