ಬೆಂಗಳೂರು :ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಪರೀಕ್ಷೆ ಸುಸೂತ್ರ ಹಾಗೂ ಸುವ್ಯವಸ್ಥಿತವಾಗಿ ನಡೆಯಲು ಅನುಕೂಲವಾಗುವಂತೆ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ 15 ದಿನಗಳ ಕಾಲ ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಝೆರಾಕ್ಸ್, ಕಂಪ್ಯೂಟರ್ ಸೆಂಟರ್, ಸೈಬರ್ ಸೆಂಟರ್ಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.
ಪರೀಕ್ಷಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪರೀಕ್ಷಾ ಕೇಂದ್ರ ಹಾಗೂ ಕಾರಿಡಾರ್ನಲ್ಲಿ ಸಿಸಿಟಿವಿ ಅಳವಡಿಸುವಂತೆ ಈಗಾಗಲೇ ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂದರ್ಭದಲ್ಲಿ ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆಗೆ ಸಂಚಿತ ನಿಧಿಯಿಂದ 40 ಸಾವಿರ ರೂ. ಬಳಸಿಕೊಳ್ಳಲು ಸೂಚಿಸಲಾಗಿದೆ.
ಪ್ರತಿವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುತ್ತಿದೆ. ಪರೀಕ್ಷೆಗೆ ಹಾಜರಾಗುವ ರಾಜ್ಯದ ಎಲ್ಲ 10ನೇ ತರಗತಿ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಒದಗಿಸಲಾಗಿದೆ.
ಇದನ್ನೂ ಓದಿ:ಇಂದು ಕೂಡ ಪೆಟ್ರೋಲ್, ಡೀಸೆಲ್ ಲೀಟರ್‌ಗೆ ತಲಾ 80 ಪೈಸೆ ಏರಿಕೆ; ಬೆಂಗಳೂರಿನಲ್ಲಿ ತೈಲ ಬೆಲೆ ಹೀಗಿದೆ..