ಬೆಂಗಳೂರು:ಸರ್ಕಾರಿ ಪ್ರೌಢ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಬಹುಕಾಲದ ಬೇಡಿಕೆಯಾಗಿದ್ದ ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗ್ರೇಡ್-1 ಹುದ್ದೆಯಿಂದ ಗ್ರೂಪ್-ಬಿ ವೃಂದದ ದೈಹಿಕ ಶಿಕ್ಷಣ ಪರಿವೀಕ್ಷಕರ 148 ಹುದ್ದೆಗಳಿಗೆ ಮುಂಬಡ್ತಿಯನ್ನು ನೀಡಿ ಆದೇಶ ಹೊರಡಿಸುವ ಮೂಲಕ ಕರ್ನಾಟಕ ರಾಜ್ಯ ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಬಹುದಿನಗಳ ಬೇಡಿಕೆ ಈಡೇರಿಸಿದಂತಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2016ರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪದೋನ್ನತಿ ಪ್ರಕ್ರಿಯೆ ನಡೆದಿದ್ದು, ಐದು ವರ್ಷಗಳ ಕಾಲ ಪ್ರೌಢ ಶಾಲಾ ದೈಹಿಕ ಶಿಕ್ಷಕರಿಗೆ ಯಾವುದೇ ಪದೋನ್ನತಿ ನೀಡಿರಲಿಲ್ಲ. ನನೆಗುದಿಗೆ ಬಿದ್ದಿದ್ದ ಬಡ್ತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು ಆಡಳಿತಾತ್ಮಕ ಸಮಸ್ಯೆ ಬಗೆಹರಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.