ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿದರು. ಬೆಂಗಳೂರು:''ನಾವು ನಮ್ಮ ಪ್ರಣಾಳಿಕೆಯಲ್ಲಿ ಪ್ರತಿ ಪಂಚಾಯ್ತಿ ಮಟ್ಟದಲ್ಲಿ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆ ಆರಂಭಿಸುವ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ಇದನ್ನು ಯಾವ ರೀತಿ ಮಾಡಬೇಕು ಎಂಬುದರ ಕುರಿತು ಮಾರ್ಗದರ್ಶನ ನೀಡಬೇಕು ಎಂದು ಶಿಕ್ಷಕರಾದ ಗೋಪಾಲಕೃಷ್ಣ ಅವರ ಬಳಿ ಮನವಿ ಮಾಡಿದ್ದೇನೆ'' ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ತಾವು ವ್ಯಾಸಂಗ ಮಾಡಿರುವ ಎನ್‌ಪಿಸಿ ಶಾಲೆಗೆ ಸೋಮವಾರ ಭೇಟಿ ನೀಡಿದರು. ತಮ್ಮ ಗುರುಗಳಾದ ಗೋಪಾಲಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ''ಶಿಕ್ಷಣ ಕ್ಷೇತ್ರದಲ್ಲಿ ಬಹಳ ಸಾಧನೆ ಮಾಡಿದ್ದಾರೆ. ಈ ನ್ಯಾಷನಲ್ ಪಬ್ಲಿಕ್ ಶಾಲೆ ದೇಶದಲ್ಲೇ ಮೊದಲ ಸ್ವಾಯತ್ತ ಶಾಲೆಯಾಗಿದೆ. ಮಕ್ಕಳು ಶಿಕ್ಷಣಕ್ಕಾಗಿ ಹಳ್ಳಿಯಿಂದ ನಗರಕ್ಕೆ ವಲಸೆ ಬರುವುದನ್ನು ತಪ್ಪಿಸಲು ಈ ಕಾರ್ಯಕ್ರಮ ರೂಪಿಸಿದ್ದೇವೆ. ನಾನು ಪರಮೇಶ್ವರ್ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವರ ಜೊತೆಗೆ ಈ ಬಗ್ಗೆ ಸಮಗ್ರ ಚರ್ಚೆ ಮಾಡುತ್ತೇವೆ'' ಎಂದರು.
''ಹಳ್ಳಿ ಜನರಿಗೂ ಕೂಡ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂಬ ಹಂಬಲವಿದೆ. ಎಲ್ಲ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಬೇಕು. ಇದು ನಮ್ಮ ಸರ್ಕಾರದ ಆದ್ಯತೆ'' ಎಂದು ಅವರು, ಕಾಂಗ್ರೆಸ್ ಪ್ರಣಾಳಿಕೆ ಭರವಸೆ ಜಾರಿ ಅಸಾಧ್ಯ ಎಂಬ ವಿರೋಧ ಪಕ್ಷಗಳ ನಾಯಕರ ಹೇಳಿಕೆ ಪ್ರತಿಕ್ರಿಯಿಸಿದ ಅವರು, "ಯಾವುದೇ ಊಹಾಪೋಹಗಳ ಅಗತ್ಯವಿಲ್ಲ. ಚರ್ಚೆ ಮಾಡುವವರಿಗೆ, ಟೀಕೆ ಮಾಡುವವರಿಗೆ, ಸಲಹೆ ನೀಡುವವರಿಗೆ ಬೇಡ ಎನ್ನಲು ಸಾಧ್ಯವಿಲ್ಲ. ಮಾತನಾಡುವವರು, ಟೀಕೆ ಮಾಡುವವರು ಮಾಡಲಿ. ನಾವು ಕೆಲಸ ಮಾಡಿ ಉತ್ತರ ನೀಡುತ್ತೇವೆ" ಎಂದು ತಿರುಗೇಟು ನೀಡಿದರು. ಬೆಂಗಳೂರಿನ ಅಧಿಕಾರಿಗಳ ಜೊತೆ ನಡೆಯಲಿರುವ ಸಭೆ ಬಗ್ಗೆ ಉತ್ತರಿಸಿದ ಅವರು, "ಅಧಿಕಾರಿಗಳ ಬೇಜವಾಬ್ದಾರಿಯಿಂದ ಯಾರಿಗೂ ತೊಂದರೆ ಆಗಬಾರದು. ಭ್ರಷ್ಟಾಚಾರ ಮುಕ್ತ ಆಡಳಿತ ನೀಡಬೇಕು. ಇದರಿಂದ ಸಭೆ ಮಾಡುತ್ತಿದ್ದೇವೆ" ಎಂದು ಅವರು ತಿಳಿಸಿದರು.
ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ- ಡಿಕೆಶಿ:''ನಾವು ಕೊಟ್ಟ ಮಾತಿನಂತೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ಮುಖ್ಯಮಂತ್ರಿಗಳು ಹಣಕಾಸು ಸಚಿವಾಲಯ ಜವಾಬ್ದಾರಿ ಹೊತ್ತಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ'' ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಸದಾಶಿವ ನಗರ ನಿವಾಸ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದೆ. ಈ ಬಗ್ಗೆ ಚರ್ಚೆ ಮಾಡುತ್ತೇವೆ. ನಮ್ಮದು ಜವಾಬ್ದಾರಿಯುತ ಸರ್ಕಾರ, ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವೆ. ಯುವಕರು, ಮಹಿಳೆಯರಿಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲ ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡುತ್ತಿದ್ದು, ನಾನು ಕೂಡ ನನ್ನ ಸಚಿವಾಲಯಗಳ ಅಧಿಕಾರಿಗಳ ಸಭೆ ಮಾಡುತ್ತಿದ್ದೇನೆ ಎಂದು ತಿಳಿಸಿದರು.
ಅಧಿಕಾರಿಗಳ ಜೊತೆ ಸಭೆ:ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಅವರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಅವರು ಕೂಡ ವಿವಿಧ ಅಧಿಕಾರಿಗಳೊಂದಿಗೆ ಸರಣಿ ಸಭೆ ನಡೆಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಪಾಲಿಕೆ ಕಚೇರಿಯಲ್ಲಿ ಸೋಮವಾರ ಡಿ.ಕೆ. ಶಿವಕುಮಾರ್ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ಬಿಡಿಎ ಅಧಿಕಾರಿಗಳೊಂದಿಗೆ ಬಿಡಿಎ ಪ್ರಧಾನ ಕಚೇರಿಯಲ್ಲಿ ಸಭೆ ಕರೆದಿದ್ದಾರೆ. ಸಂಜೆ ನೀರಾವರಿ ಅಧಿಕಾರಿಗಳೊಂದಿಗೆ ಡಿಸಿಎಂ ಸಭೆ ನಡೆಸಲಿದ್ದಾರೆ.
ಇದನ್ನೂ ಓದಿ:ರಾಜಸ್ಥಾನದಲ್ಲಿ ಗೆಹ್ಲೋಟ್ vs ಪೈಲಟ್: ಇಬ್ಬರು ನಾಯಕರ ಬೇಡಿಕೆ ಆಲಿಸಲಿರುವ ಖರ್ಗೆ