ಬೆಂಗಳೂರು: ನಾಳೆ ವಿಶ್ವದಾದ್ಯಂತ ಏಕಕಾಲದಲ್ಲಿ ನಡೆಯಲಿರುವ ಎಸ್.ಎ.ಟಿ (SAT) ಪರೀಕ್ಷೆಗಳಿಗೆ ಕರ್ನಾಟಕದಿಂದ ಸಾವಿರಾರು ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ಆದರೆ ನಾಳಯೇ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಿರುವುದರಿಂದ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಅತಂಕಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆ ಸೂಕ್ತ ಭದ್ರತೆ ಒದಗಿಸಬೇಕೆಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಈ ಕುರಿತು ಇಂದು ಬೆಳಗ್ಗೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ ಪಂತ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಎಂ.ಬಿ. ಪಾಟೀಲ್ ಅವರು, ಕರ್ನಾಟಕದಲ್ಲಿ ಬೆಂಗಳೂರಿನ ಬಿಷಪ್ ಕಾಟನ್ ಸ್ಕೂಲ್ ಏಕಮಾತ್ರ ಪರೀಕ್ಷಾ ಕೇಂದ್ರವಾಗಿದ್ದು, ಅಮೆರಿಕದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಬಯಸುವ ವಿಶ್ವದ ವಿದ್ಯಾರ್ಥಿಗಳು ಎಸ್.ಎ.ಟಿ(SAT) ಪರೀಕ್ಷೆ ಬರೆಯುವುದು ಕಡ್ಡಾಯವಾಗಿದೆ. ಈ ಪರೀಕ್ಷೆ ವಿಶ್ವದಲ್ಲಿ ಏಕಕಾಲದಲ್ಲಿ ನಡೆಯುವುದರಿಂದ ಇದನ್ನು ಬಂದ್ ಕಾರಣ ಮುಂದೂಡುವ ಅಥವಾ ರದ್ದು ಪಡೆಸುವುದು ಅಸಾಧ್ಯ ಎಂದು ಹೇಳಿದ್ದಾರೆ.