ಬೆಂಗಳೂರು: ಮಹದೇವಪುರ ಕ್ಷೇತ್ರದ ಕಣ್ಣೂರು ಪಂಚಾಯಿತಿ ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾಗಿ ಕಸ ಸುರಿಯುತ್ತಿರುವ ಬಿಬಿಎಂಪಿ ವಿರುದ್ಧ ಸ್ಥಳೀಯರು ಕಸ ವಿಲೇವಾರಿ ಮಾಡುತ್ತಿದ್ದ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.
ಬಿಬಿಎಂಪಿ ವತಿಯಿಂದ ಅವೈಜ್ಞಾನಿಕ ಕಸ ವಿಲೇವಾರಿ ಆರೋಪ: ರೊಚ್ಚಿಗೆದ್ದ ಸಾರ್ವಜನಿಕರಿಂದ ಪ್ರತಿಭಟನೆ - ಶಾಸಕ ಅರವಿಂದ ಲಿಂಬಾವಳಿ
ಸಿಲಿಕಾನ್ ಸಿಟಿ ಖ್ಯಾತಿಯ ಬೆಂಗಳೂರು ಕಸದ ಸಮಸ್ಯೆಯಿಂದ ಅಪಖ್ಯಾತಿಗೆ ಗುರಿಯಾಗಿದ್ದು, ಇದಕ್ಕೆ ಪರಿಹಾರ ಕಲ್ಪಿಸುವಲ್ಲಿ ಬಿಬಿಎಂಪಿ ವಿಫಲವಾಗಿರುವುದು ಮತ್ತೊಮ್ಮೆ ಗೋಚರವಾಗಿದೆ.
ಪ್ರತಿಭಟನೆ
ಮಹದೇವಪುರ, ಕಣ್ಣೂರಿನ ಮಿಟಗಾನಹಳ್ಳಿಯಲ್ಲಿ ಬಿಬಿಎಂಪಿ ಕಸ ಸುರಿಯುತ್ತಿರುವುದನ್ನು ಖಂಡಿಸಿ ಕಣ್ಣೂರು ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು. ಇಲ್ಲಿನ ಕ್ವಾರಿಯಲ್ಲಿ ಅವೈಜ್ಞಾನಿಕವಾಗಿ ಕಸ ಸುರಿಯುತ್ತಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರ ಆರೋಗ್ಯ ಹಾಳಾಗಿ ಹಲವು ರೋಗಗಳಿಗೆ ತುತ್ತಾಗುತ್ತಿರುವುದಾಗಿ ಸಾರ್ವಜನಿಕರು ಹೇಳುತ್ತಿದ್ದಾರೆ.
ಸ್ಥಳಕ್ಕೆ ಶಾಸಕ ಅರವಿಂದ ಲಿಂಬಾವಳಿ ಹಾಗೂ ಬಿಬಿಎಂಪಿ ಸಹಾಯಕ ಆಯುಕ್ತ ರಣದೀಪ್ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಸಮಸ್ಯೆಗೆ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.