ಬೆಂಗಳೂರು: ಬಿಜೆಪಿ, ಜೆಡಿಎಸ್ ಪಕ್ಷದ ನಾಯಕರು ಅನಾವಶ್ಯಕವಾಗಿ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ಮೇಲೆ ಐಟಿ ದಾಳಿಯ ನೆಪವೊಡ್ಡಿ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬುಧವಾರ ರೇಸ್ ಕೋರ್ಸ್ ರಸ್ತೆ ಬಳಿಯ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ನಾಯಕರು ವಿನೂತನ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ಮುಖಂಡ ಎಸ್.ಮನೋಹರ್, ಭಾರತೀಯ ಜನತಾ ಪಕ್ಷದೊಂದಿಗೆ ಒಳ ಒಪ್ಪಂದ ಮಾಡಿಕೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಈ ಹಿಂದೆ ಬಿಜೆಪಿ ಸರ್ಕಾರದ ಮಂತ್ರಿಗಳನ್ನು ಬ್ಲ್ಯಾಕ್ಮೇಲ್ ಮಾಡಿ ಒಳಒಪ್ಪಂದ ಮಾಡಿಕೊಂಡು ಲಾಭ ಪಡೆದಿರುವುದು ಎಲ್ಲರಿಗೂ ತಿಳಿದಿದೆ. ಈಗ ಬಿಜೆಪಿಯೊಂದಿಗೆ ಕೈಜೋಡಿಸಿ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮಂತ್ರಿಗಳ ವಿರುದ್ಧ ಬ್ಲ್ಯಾಕ್ಮೇಲ್ ತಂತ್ರ ಮಾಡುತ್ತಿದ್ದಾರೆ. ಕುಮಾರಸ್ವಾಮಿ ಒಬ್ಬ ನೈಜ ಬ್ಲ್ಯಾಕ್ಮೇಲ್ ರಾಜಕಾರಣಿ ಎಂದು ರಾಜ್ಯದ ಜನತೆಗೆ ಈಗಾಗಲೇ ಗೊತ್ತಾಗಿದೆ ಎಂದು ಟೀಕಿಸಿದರು.
ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರ ನಡೆಸಿದ ಅವರು ಇಂದು ಅದನ್ನು ಮರೆಮಾಚಲು ಮುಂದಾಗಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಜನಪ್ರಿಯತೆಯನ್ನು ಕುಗ್ಗಿಸಲು ಜೆಡಿಎಸ್ನೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕರು ಎಷ್ಟು ಮೂರ್ಖರು ಎಂದು ಈಗ ಜನತೆಗೆ ತಿಳಿದಿದೆ. ಕೇಂದ್ರ ಸರ್ಕಾರದ ಆಧೀನದಲ್ಲಿರುವ ಆದಾಯ ತೆರಿಗೆ, ಇಡಿ, ಸಿಬಿಐ, ಇಲಾಖೆಗಳು ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂಬುದು ಗೊತ್ತಾಗಿದೆ ಎಂದು ಕಿಡಿ ಕಾರಿದರು.