ಬೆಂಗಳೂರು:ಕಳೆದ ಆರು ವರ್ಷದ ಹಿಂದೆ ಗೋವಿನ ಹತ್ಯೆ ಮಾಡುವವರ ಕೈ ಕಡಿಯುವಂತೆ ಕರೆ ನೀಡಿದ್ದ ಆರೋಪದಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧದ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಈ ಸಂಬಂಧ ವಿಜಯಪುರ ಜಿಲ್ಲೆ ಬಬಲೇಶ್ವರ ಪೊಲೀಸ್ ಠಾಣೆಯ ದಾಖಲಾಗಿದ್ದ ಪ್ರಕರಣವನ್ನು ರದ್ದು ಕೋರಿ ಪ್ರಮೋದ್ ಮುತಾಲಿಕ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಅವರಿದ್ದ ಕಲಬುರಗಿ ನ್ಯಾಯಪೀಠ ಪ್ರಕರಣ ರದ್ದು ಪಡಿಸಿ ಆದೇಶಿಸಿದೆ.
ಭಾರತೀಯ ದಂಡ ಸಂಹಿತೆ (ಐಪಿಸಿ)ಸೆಕ್ಷನ್ 295(ಎ) ಅಡಿ ಪ್ರಕರಣ ದಾಖಲಿಸಲು ಸರ್ಕಾರದ ಪೂರ್ವಾನುಮತಿ ಅಗತ್ಯವಿದೆ. ಅದು ಇಲ್ಲದಿದ್ದರೆ, ಪ್ರಕರಣವನ್ನು ಪರಿಗಣಿಸಲೇಬಾರದು. ಆದರೆ, ಈ ಪ್ರಕರಣದಲ್ಲಿ ಯಾವುದೇ ರೀತಿಯ ಪೂರ್ವಾನುಮತಿ ಪಡೆದಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣ ರದ್ದು ಮಾಡುತ್ತಿರುವುದಾಗಿ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಜೊತೆಗೆ, ಆರೋಪ ಸಂಬಂಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸರ್ಕಾರದ ಅನುಮೋದನೆ ಇಲ್ಲದೆ ದೂರನ್ನು ಮಾನ್ಯ ಮಾಡಿದೆ. ನಿಯಮದಲ್ಲಿ ಅದಕ್ಕೆ ಅವಕಾಶವಿಲ್ಲ. ಹಾಗಾಗಿ ಪ್ರಕರಣ ಕಾನೂನಿನಡಿ ಊರ್ಜಿತವಾಗುವುದಿಲ್ಲ ಎಂದು ಪೀಠ ತಿಳಿಸಿದೆ. ಅಲ್ಲದೆ, ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಯಾವುದೇ ಸತ್ಯಾಂಶಗಳಿಲ್ಲ. ಆರೋಪ ಸಾಬೀತುಪಡಿಸುವ ಅಂಶಗಳಿಲ್ಲ. ಪೊಲೀಸ್ ಸಿಬ್ಬಂದಿಯ ಹೇಳಿಕೆಗಳನ್ನು ಬಿಟ್ಟರೆ ಬೇರೆ ಯಾವುದೇ ಸಾಕ್ಷ್ಯವನ್ನು ಒದಗಿಸಿಲ್ಲ. ಸ್ವತಂತ್ರ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳಿಲ್ಲ. ಆರೋಪಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎನ್ನಲಾದ ವಿಡಿಯೋ ಕೂಡ ಇಲ್ಲ. ಹಾಗಾಗಿ ಆರೋಪಗಳನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ನ್ಯಾಯ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಬಿಜೆಪಿ ಆಡಳಿತದ ಎಲ್ಲ ಹಗರಣಗಳನ್ನು ಎಸ್ಐಟಿ ತನಿಖೆಗೆ ಒಳಪಡಿಸಲು ಚರ್ಚೆ: ಸಚಿವ ರಾಮಲಿಂಗಾ ರೆಡ್ಡಿ
ಪ್ರಕರಣದ ಹಿನ್ನೆಲೆ ಏನು?:2017ರ ಫೆ.25ರಂದು ಬಬಲೇಶ್ವರದಲ್ಲಿ ನಡೆದ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮದಲ್ಲಿ ಶ್ರೀರಾಮಸೇನೆ ಮುಖ್ಯಸ್ಥರಾಗಿದ್ದ ಪ್ರಮೋದ್ ಮುತಾಲಿಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಆಗ ಮಾಡಿದ್ದ ಭಾಷಣದಲ್ಲಿ ಪ್ರಮೋದ್ ಮುತಾಲಿಕ್ ಅವರು, ಗೋವಿನ ಹತ್ಯೆ ಮಾಡಿದವರ ಕೈಯನ್ನು ಕಡಿಯಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಪೊಲೀಸ್ ಸಬ್ ಇನಸ್ಪೆಕ್ಟರ್ ಸಮಕ್ಷಮದಲ್ಲೇ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆ ಬಗ್ಗೆೆ ಪೊಲೀಸರು ತನಿಖೆ ನಡೆಸಿ ಆರೋಪ ಪಟ್ಟಿಯನ್ನು ಸಹ ಸಲ್ಲಿಸಿದ್ದರು. ಈ ಸಂಬಂಧದ ಪ್ರಕರಣ ರದ್ದು ಕೋರಿ ಮುತಾಲಿಕ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ:Lok sabha election: ಲೋಕಸಭೆ ಚುನಾವಣೆಯಲ್ಲಿ 28ಕ್ಕೆ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ : ಅಶ್ವತ್ಥನಾರಾಯಣ್