ಕರ್ನಾಟಕ

karnataka

ETV Bharat / state

ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ವಿಚಾರ: ಸರ್ಕಾರಕ್ಕೆ ಕೆಎಟಿ ನೋಟಿಸ್, ವಿಚಾರಣೆ ಮುಂದೂಡಿಕೆ

ರಾಜ್ಯ ಸರ್ಕಾರದ ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಆದೇಶ ಪ್ರಶ್ನಿಸಿ ಅಭ್ಯರ್ಥಿಗಳು ಕರ್ನಾಟಕ ಆಡಳಿತ ನ್ಯಾಯ ಮಂಡಳಿ(Karnataka State Administrative Tribunal)ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿತು.

psi-exam-cancel-issue-in-karnataka-state-administrative-tribunal
ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ವಿಚಾರ : ವಿಚಾರಣೆ ಮುಂದೂಡಿದ ಕರ್ನಾಟಕ ಆಡಳಿತ ನ್ಯಾಯ ಮಂಡಳಿ

By

Published : May 4, 2022, 9:31 PM IST

Updated : May 4, 2022, 9:47 PM IST

ಬೆಂಗಳೂರು:ಪೊಲೀಸ್‌ ಸಬ್‌ ಇನ್ಸ್​ಪೆಕ್ಟರ್‌ (ಪಿಎಸ್‌ಐ) ನೇಮಕಾತಿಯಲ್ಲಿ ಅಕ್ರಮ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮರುಪರೀಕ್ಷೆಗೆ ಮುಂದಾಗಿರುವ ರಾಜ್ಯ ಸರ್ಕಾರದ ಆದೇಶ ರದ್ದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಪಿಎಸ್ಐ ಹುದ್ದೆ ನೇಮಕಾತಿಗೆ ಮರು ಪರೀಕ್ಷೆ ನಡೆಸದಂತೆ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿ ಎಲ್ಎನ್ ಪವಿತ್ರಾ ಸೇರಿದಂತೆ 28 ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಯನ್ನು ಇಂದು ಕೆಎಟಿ ರಜಾ ಕಾಲದ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕುರಿತಂತೆ ಸಿಐಡಿ ಈಗಾಗಲೇ ತನಿಖೆ ನಡೆಸುತ್ತಿದೆ. ಅದರ ಮಧ್ಯಂತರ ವರದಿಯಲ್ಲಿ ಅಕ್ರಮದ ಕುರಿತು ಪ್ರಸ್ತಾಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮರು ಪರೀಕ್ಷೆಗೆ ಮುಂದಾಗಿದೆ. ಇದು ಸರಿಯಾದ ಕ್ರಮವಲ್ಲ. ಸಿಐಡಿ ತನಿಖೆ ಇನ್ನೂ ಪೂರ್ಣಗೊಂಡಿಲ್ಲ.

ಸಿಐಡಿ 545 ಅಭ್ಯರ್ಥಿಗಳಿಗೂ ಪತ್ರ ಬರೆದು ಒಎಂಆರ್‌ ಸಲ್ಲಿಸುವಂತೆ ಸೂಚಿಸಿದೆ. ಒಎಂಆರ್‌ ಪ್ರತಿಗಳನ್ನು ವಿಧಿ ವಿಜ್ಞಾನ ಪರೀಕ್ಷೆಗೆ ಒಳಪಡಿಸದಿದ್ದರೆ ಕಳಂಕಿತರು ಮತ್ತು ಕಳಂಕ ರಹಿತರು ಯಾರು ಎಂಬುದು ತಿಳಿಯುವುದಿಲ್ಲ ಎಂದು ವಿವರಿಸಿದರು.

ಮತ್ತೆ ಪರೀಕ್ಷೆ ನಡೆಸುವುದು ಸರಿಯಲ್ಲ:ಅಲ್ಲದೇ, ಕಲಬುರಗಿಯ ಪರೀಕ್ಷಾ ಕೇಂದ್ರವೊಂದರಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತಂತೆ ಸಿಐಡಿ ತನಿಖೆ ನಡೆಸಿ ಮಧ್ಯಂತರ ವರದಿ ಸಲ್ಲಿಸಿದೆ. ಈ ವರದಿ ಆಧರಿಸಿ ಸರ್ಕಾರವೀಗ ಮರು ಪರೀಕ್ಷೆಗೆ ಮುಂದಾಗಿದೆ. 545 ಪಿಎಸ್ಐ ಹುದ್ದೆಗಳಿಗೆ 1.2 ಲಕ್ಷ ಅಭ್ಯರ್ಥಿಗಳು ಅರ್ಜಿ ಹಾಕಿದ್ದರು.

ಇಷ್ಟೊಂದು ಸ್ಪರ್ಧೆ ನಡುವೆ ನ್ಯಾಯಯುತವಾಗಿ ಆಯ್ಕೆಯಾದವರಿಗೆ ಮತ್ತೆ ಪರೀಕ್ಷೆ ನಡೆಸುವುದು ಸರಿಯಲ್ಲ. ಸಚಿನ್‌ ತೆಂಡೂಲ್ಕರ್‌ ಕೂಡ ಪ್ರತಿ ಬಾರಿ ಶತಕ ಬಾರಿಸಲು ಸಾಧ್ಯವಿಲ್ಲ. ಅಂತೆಯೇ ಪ್ರತಿ ಪರೀಕ್ಷೆಯಲ್ಲೂ ಅಭ್ಯರ್ಥಿಗಳು ಟಾಪರ್‌ ಆಗಿ ಹೊರಹೊಮ್ಮಲು ಸಾಧ್ಯವಿಲ್ಲ. ಆದ್ದರಿಂದ, ಮರು ಪರೀಕ್ಷೆ ನಡೆಸದಂತೆ ತಡೆ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರಿದರು.

ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ಒಳಾಡಳಿತ ಇಲಾಖೆಯ (ಪೊಲೀಸ್‌ ಸೇವೆಗಳು-1) ಪ್ರಧಾನ ಕಾರ್ಯದರ್ಶಿ, ಪೊಲೀಸ್‌ ಮಹಾನಿರ್ದೇಶಕರು, ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರು, ಅಪರಾಧ ತನಿಖಾ ವಿಭಾಗದ (ಸಿಐಡಿ) ಪೊಲೀಸ್‌ ಮಹಾನಿರ್ದೇಶಕರಿಗೆ ನೋಟಿಸ್‌ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಮೇ.18ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ:2021ರ ಅಕ್ಟೋಬರ್‌ 3ರಂದು ರಾಜ್ಯದ 92 ಕೇಂದ್ರಗಳಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆ ನಡೆದಿತ್ತು. ಕಲಬುರಗಿ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದೆ ಎಂಬ ವಿಚಾರ ಬಹಿರಂಗವಾಗುತ್ತಿದ್ದಂತೆ ರಾಜ್ಯ ಸರ್ಕಾರವು ಪ್ರಕರಣವು ಸಿಐಡಿ ತನಿಖೆಗೆ ವಹಿಸಿತ್ತು.

ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ಮಧ್ಯಂತರ ವರದಿ ಸಲ್ಲಿಸಿದ್ದು, ನೇಮಕಾತಿ ಅಕ್ರಮ ಪರಿಗಣಿಸಿ ಸರ್ಕಾರ ಮರು ಪರೀಕ್ಷೆ ನಡೆಸಲು ನಿರ್ಧರಿಸಿದೆ. ಇದನ್ನು ಪ್ರಶ್ನಿಸಿ ಅಭ್ಯರ್ಥಿಗಳು ಕೆಎಟಿ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ:ಪಿಎಸ್‌ಐ ಪರೀಕ್ಷಾ ಹಗರಣ.. ಸಿಐಡಿಯಿಂದ ಪ್ರಿಯಾಂಕ್ ಖರ್ಗೆಗೆ ಮತ್ತೊಂದು ನೋಟಿಸ್​

Last Updated : May 4, 2022, 9:47 PM IST

ABOUT THE AUTHOR

...view details